ಮಂಗಳೂರು ಮತ್ತು ಹುಬ್ಬಳ್ಳಿ ಮಹಾನಗರಗಳಂತೆ ಹಾಸನ ನಗರ ಅಭಿವೃದ್ಧಿ : ಜಗತ್ ಪ್ರಕಾಶ್ ನಡ್ಡಾ

ಮಂಗಳೂರು ಮತ್ತು ಹುಬ್ಬಳ್ಳಿ ಮಹಾನಗರಗಳಂತೆ ಹಾಸನ ನಗರ ಅಭಿವೃದ್ಧಿ : ಜಗತ್ ಪ್ರಕಾಶ್ ನಡ್ಡಾ
Published on

ಹಾಸನ: ಮಂಗಳೂರು ಮತ್ತು ಹುಬ್ಬಳ್ಳಿ ಮಹಾನಗರಗಳಂತೆ ಹಾಸನ ನಗರವನ್ನೂ ಅಭಿವೃದ್ಧಿಪಡಿಸಲು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಕರೆ ನೀಡಿದರು.


ನಗರದ ಬಿ.ಎಂ. ರಸ್ತೆಯಲ್ಲಿರುವ ಬಿಎಸ್‌ಎನ್‌ಎಲ್ ಭವನದ ಎದುರಿನ ಮೈದಾನದಲ್ಲಿ ಮಂಗಳವಾರ ಸಂಜೆ ಆಯೋಜಿಸಿದ್ದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಪ್ರಗತಿ ಪಥದಲ್ಲಿ ಸಾಗುತ್ತಿದೆ. ಈ ವಿಕಾಸದ ಜೊತೆಗೂಡಲು ಹಾಸನ ಜಿಲ್ಲೆಯಲ್ಲಿಯೂ ಬಿಜೆಪಿಯನ್ನು ಸಂಪೂರ್ಣವಾಗಿ ಬೆಂಬಲಿಸಬೇಕು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆಯುತ್ತಿದೆ ಎಂಬುದು ನಿಮಗೆ ತಿಳಿದಿದೆ ಎಂದರು.


ದೇಶದಲ್ಲಿ ಇಂದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾಲವಂಬನೆ ಸಾಧಿಸಲಾಗಿದೆ. ನಿಮಗೆ ವಿದ್ಯುತ್ ಬೇಕು ಎಂದರೆ ಬಿಜೆಪಿಗೆ ಮತ ಹಾಕಿ. ಪವರ್ ಕಟ್ ಸ್ಥಿತಿ ಬೇಕೆಂದರೆ ಕಾಂಗ್ರೆಸ್ ಬೆಂಬಲಿಸಿ. ಹಿಂದಿನ ಸಿದ್ದರಾಮಯ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿತ್ತು. ಅಲ್ಲದೆ ಸಮಾಜದಲ್ಲಿ ಅಶಾಂತಿ ಮೂಡಿಸಿದ್ದ 1600ಕ್ಕೂ ಹೆಚ್ಚಿನ ಪಿಎಫ್‌ಐ ಕಾರ್ಯಕರ್ತರನ್ನು ಜೈಲಿನಿಂದ ಬಿಡುಗಡೆ ಗೊಳಿಸಿತ್ತು. 200 ಕ್ಕೂ ಹೆಚ್ಚಿನ ಪಿಎಫ್‌ಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆದಿತ್ತು. ಕಾಂಗ್ರೆಸ್ ಪಕ್ಷದ್ದು ಜಾತಿ-ಜಾತಿಗಳ ನಡುವೆ, ಧರ್ಮ-ಧರ್ಮಗಳ ನಡುವೆ ಒಡೆದು ಆಳುವ ನೀತಿ. ನಮ್ಮದು ಏಕತೆ ಸಾಧಿಸುವ ಪಕ್ಷ. ಸಮಾಜದಲ್ಲಿ ಶಾಂತಿ, ದೇಶದ ಅಭಿವೃದ್ಧಿ ಸಾಧಿಸಲು ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.


ದೇಶ ಇಂದು ಮೊಬೈಲ್ ಫೋನ್‌ಗಳ ತಯಾರಿಕೆಯಲ್ಲಿ ಪ್ರಪಂಚದಲ್ಲೇ ಎರಡನೇ ಸ್ಥಾನದಲ್ಲಿದೆ. ಆಟೊಮೊಬೈಲ್ ಉದ್ಯಮದಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ. ಉಕ್ಕು ಉತ್ಪಾದನೆಯಲ್ಲಿ 2ನೇ ಸ್ಥಾನಕ್ಕೇರಿದೆ. ಔಷಧ ತಯಾರಿಕೆ ಉದ್ಯಮದಲ್ಲಿ ಅಪಾರ ಪ್ರಗತಿ ಸಾಧಿಸಿದ್ದು, ಕಡಿಮೆ ಬೆಲೆಯಲ್ಲಿ ಜನರಿಗೆ ಔಷಧ ಒದಗಿಸಲಾಗುತ್ತಿದೆ. ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಲಸಿಕೆ ಉತ್ಪಾದನೆ ಮಾಡಿದ್ದಲ್ಲದೆ, ನೂರಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ಸರಬರಾಜು ಮಾಡಲಾಗಿದೆ. 48 ಕ್ಕೂ ಹೆಚ್ಚಿನ ದೇಶಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ಒದಗಿಸಲಾಗಿದೆ. ನಮ್ಮಲ್ಲಿ ಜನರ ಮುಖದ ಮೇಲಿನ ಮಾಸ್ಕ್ ಮರೆಯಾಗಿ ವರ್ಷ ಕಳೆದಿದೆ. ಆದರೆ ಅಮೆರಿಕ ಅಧ್ಯಕ್ಷರು ಇನ್ನೂ ಮಾಸ್ಕ್ ಧರಿಸಿ ಓಡಾಡುತ್ತಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿಯನ್ನು ವಿಶ್ವಕ್ಕೆ ಪರಿಚಯಿಸಿದೆ ಎಂದು ಬಣ್ಣಿಸಿದರು.


ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಮಾತನಾಡಿ, ತಮ್ಮದು ರೈತರ ಪರವಾದ ಪಕ್ಷ ಎಂದು ಹೇಳಿಕೊಳ್ಳುವವರು ಸರ್ಕಾರ ನಡೆಸಿದಾಗ ರೈತರ ಅಭಿವೃದ್ಧಿಗೆ ಯಾವುದೇ ಯೋಜನೆ ಜಾರಿಗೆ ತರಲಿಲ್ಲ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾನಿಧಿ ಯೋಜನೆ ಜಾರಿಗೊಳಿಸಿತು. ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗಲು ಹಿಂದೆ ಮುಖ್ಯಮಂತ್ರಿ ಆಗಿದ್ದ ಬಿ.ಎಸ್. ಯಡಿಯೂರಪ್ಪ ಮತ್ತು ಹಾಸನ ಶಾಸಕ ಪ್ರೀತಮ್ ಗೌಡರೇ ಬರಬೇಕಾಯಿತು ಎಂದು ಹೇಳಿದರು.


ಹಾಸನ ಶಾಸಕ ಪ್ರೀತಮ್ ಗೌಡ, ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಕೆ. ಸುರೇಶ್, ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net