ಮಂದಿನ ವರ್ಷಾಂತ್ಯಕ್ಕೆ ಹಾಸನದಿಂದ ವಿಮಾನ ಹಾರಾಟ ಆರಂಭ

22_HSN_02
Published on

ಹಾಸನ: ಹಾಸನ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯು 2023ರ ಡಿಸೆಂಬರ್ ಒಳಗೆ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷಾಂತ್ಯಕ್ಕೆ ವಿಮಾನ ಹಾರಾಟವೂ ಪ್ರಾರಂಭವಾಗಲಿದೆ ಎಂದು ಕರ್ನಾಟಕ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಕೆ. ಬೆಲ್ದಾಳೆ ತಿಳಿಸಿದರು.
ಶುಕ್ರವಾರ ಮಧ್ಯಾಹ್ನ ನಗರದ ಹೊರವಲಯ ಭೂವನಹಳ್ಳಿಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿ, ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ವೇಗ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ಮೇರೆಗೆ ಈ ಭೇಟಿ ನೀಡಲಾಗಿದೆ. ಹಾಸನದ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಇನ್ನೂ 5.13 ಎಕರೆ ಹೆಚ್ಚುವರಿ ಭೂಮಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಭೂ ಮಾಲೀಕರೊಂದಿಗಿನ ಮಾತುಕತೆ ಫಲಪ್ರದವಾಗಿದ್ದು, ಶೀಘ್ರ ಪರಿಹಾರ ಒದಗಿಸಿ ಭೂ ಸ್ವಾಧೀನಪಡಿಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ವಿಮಾನ ನಿಲ್ದಾಣದ ರನ್ ವೇ ನಿರ್ಮಾಣ ಹಾಗೂ ಇತರ ಮೂಲ ಸೌಕರ್ಯ ಕಲ್ಪಿಸಲು ಈಗಾಗಲೇ 193 ಕೋಟಿ ರೂ.ಗಳು ಬಿಡುಗಡೆಯಾಗಿದ್ದು, ಶೇಕಡ 30ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ರಸ್ತೆ ಸಂಪರ್ಕ ಸೇರಿದಂತೆ ಇತರೆ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ 70 ಕೋಟಿ ರೂ. ಬಿಡುಗಡೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.
ಹಾಸನದಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದರೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೂ ಅನುಕೂಲವಾಗಲಿದೆ. ಕೃಷಿ ಉತ್ಪನ್ನಗಳ ರಫ್ತು ವ್ಯವಹಾರಕ್ಕೂ ಉತ್ತೇಜನ ದೊರೆಯಲಿದೆ. ನೆರೆಯ ಜಿಲ್ಲೆಗಳಾದ ಮಂಡ್ಯ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾಸನ ಕ್ಷೇತ್ರದ ಶಾಸಕ ಪ್ರೀತಂ ಗೌಡ ಮಾತನಾಡಿ, ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿರುವ ಹೆಚ್ಚುವರಿ 5.13 ಎಕರೆ ಭೂಮಿಗೆ ಪ್ರತಿ ಎಕರೆಗೆ 1.20 ಕೋಟಿ ರೂ. ನಂತೆ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯುತ್ ಮಾರ್ಗ ಬದಲಾವಣೆ ಮತ್ತು ಸಂಪರ್ಕ ರಸ್ತೆ ನಿರ್ಮಾಣ ಸಂಬಂಧ ಈಗಾಗಲೇ ಮಾತುಕತೆ ಅಂತಿಮವಾಗಿದ್ದು, ಶೀಘ್ರ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಮತ್ತು ಇತರ ಅಧಿಕಾರಿಗಳು ಸ್ಥಳದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net