ಮಕ್ಕಳ ಕೈಯಲ್ಲಿ ಮೊಬೈಲ್ ಫೋನ್ ಕೊಡಬೇಡಿ

01 (1) copy
Published on


ಯಾದಗಿರಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ್ ತಿಳಿಸಿದರು.

ನಗರದ ನವನಂದಿ ಶಿಕ್ಷಣ ಸಂಸ್ಥೆಯಲ್ಲಿ ಜಿಪಂ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದ್ದೇ ಇರುತ್ತದೆ. ಆದರೆ ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶಿಕ್ಷಕರಿಂದ ಆಗಬೇಕು ಎಂದರು.
ಬದಲಾದ ಇಂದಿನ ಕಾಲದಲ್ಲಿ ಪಾಲಕರು ಮಕ್ಕಳ ಕೈಯಲ್ಲಿ ಮೊಬೈಲ್ ಕೊಡುತ್ತಿರುವುದು ಆತಂಕಕಾರಿ ಸಂಗತಿ. ಮೊಬೈಲ್ ಬಳಸುವುದು ತಪ್ಪು ಎಂದು ನಾನು ಹೇಳುತ್ತಿಲ್ಲ. ಆದರೆ ಅತೀಯಾದ ಬಳಕೆ ಸರಿಯಲ್ಲ. ಇದರಿಂದ ಅವರ ಅಭ್ಯಾಸ ಕುಂಠಿತಗೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದರು.
ಮಕ್ಕಳಿಗೆ ಅಭಿರುಚಿ ಬೆಳೆಸಲು ಇಂಥ ಮಹತ್ವದ ಯೋಜನೆ ಜಾರಿಗೆ ತಂದಿದೆ. ಜಿಲ್ಲಾ ಮತ್ತು ರಾಜ್ಯ ಮಟ್ಟದವರೆಗೆ ನಮ್ಮ ಮಕ್ಕಳು ಮಿಂಚುವಂತಾಗಲು ಶಿಕ್ಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಸೂಚಿಸಿದರು.
ಡಿಡಿಪಿಐ ಶಾಂತಗೌಡ ಪಾಟೀಲ್ ಮಾತನಾಡಿ, ಮಕ್ಕಳಲ್ಲಿನ ಕಲೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಅಳೆದು ಪ್ರೋತ್ಸಾಹಿಸಲು ಈ ಕಾರ್ಯಕ್ರಮ ಪೂರಕವಾಗಿದೆ. ಮಗುವಿನ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಜತೆಯಲ್ಲಿ

ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ಸಹಕಾರಿಯಾಗಲಿವೆ ಎಂದು ಹೇಳಿದರು.
ಬಿಇಒ ಅಮೃತಾಬಾಯಿ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಯುಡಾ ಅಧ್ಯಕ್ಷ ರುದ್ರಗೌಡ ಪಾಟೀಲ್, ಸಂಸ್ಥೆ ಅಧ್ಯಕ್ಷ ಬಸವರಾಜ ಶಿವರಾಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ ಕೆಂಭಾವಿ, ಪ್ರಮುಖರಾದ ಮೋಹನಬಾಬು, ಬಸವರಾಜ ಚಂಡರಕಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net