

ಮದ್ದೂರು: ಮಕ್ಕಳ ಪ್ರತಿಭೆ ಗುರುತಿಸಲು ಮಾಡಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಲು ನಿರಂತರ ಅಭ್ಯಾಸ ಅತ್ಯಗತ್ಯ ಎಂದು ಪುರಸಭೆ ಅಧ್ಯಕ್ಷೆ ಕೋಕಿಲಾ ಅರುಣ್ ಹೇಳಿದರು.
ಪಟ್ಟಣದ ಶಿವಪುರದ ಪೂರ್ಣ ಪ್ರಜ್ಞಾ ಕಾನ್ವೆಂಟ್‌ನಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ 2024-25 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲ ಒಂದು ಕಲೆ ಇರುತ್ತದೆ. ಅಂತಹ ಕಲೆಯನ್ನು ಗುರುತಿಸಿ, ಪ್ರೋತ್ಸಾಹಿಸಿದರೆ ಮಕ್ಕಳು ಉನ್ನತ ಮಟ್ಟದ ಸಾಧನೆ ಮಾಡುತ್ತಾರೆ. ಈ ನಿಟ್ಟಿಯಲ್ಲಿ ವಿದ್ಯಾರ್ಥಿಗಳಲ್ಲಿರುವ ಅಸಾಮಾನ್ಯ ಕಲೆಯನ್ನು ಪತ್ತೆ ಹಚ್ಚುವುದು ಪಾಲಕರ ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಮಾತನಾಡಿ, ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 21 ಕ್ಲಸ್ಟರ್ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ಸುಮಾರು 850 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 150 ತೀರ್ಪುಗಾರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆಯಿದ್ದು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿ ಅದ್ವಿತೀಯ ಸಾಧನೆ ಮಾಡಲಿದ್ದಾರೆ. ಇದಕ್ಕೆ ಶಿಕ್ಷಣ ಇಲಾಖೆ ಅಗತ್ಯ ಸಹಕಾರ ಹಾಗೂ ಮಾರ್ಗದರ್ಶನ ನೀಡಲಿದೆ ಎಂದರು.
ಪುರಸಭೆ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆ ಅಧ್ಯಕ್ಷೆ ಪಿ.ಕಸ್ತೂರಿ, ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ, ನಿವೃತ್ತ ಪ್ರಾಂಶುಪಾಲ ಡಾ.ಕೃಷ್ಣ, ಉಪನ್ಯಾಸಕ ರಾಜೇಂದ್ರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಶಿಕ್ಷಕರ ವಿವಿಧ ಸಂಘದ ಪದಾಧಿಕಾರಿಗಳಾದ ದೇವರಾಜು, ನಾಗೇಶ್, ಚಂದ್ರಶೇಖರ್, ರವೀಶ್, ಮಹೇಂದ್ರ, ಬೈರೇಗೌಡ, ರಮೇಶ್ ಇದ್ದರು.