

ಹುಮನಾಬಾದ್: ವಿದ್ಯಾರ್ಥಿಗಳಲ್ಲಿ ಹುದಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದ್ದು, ಈ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿನ ಪ್ರತಿಭೆ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆಗೈಯಬೇಕೆಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಹುಮನಾಬಾದ್ ಮತ್ತು ಚಿಟಗುಪ್ಪ ತಾಲೂಕು ಮಟ್ಟಡ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಪಾಲಕರು ಹಾಗೂ ಶಿಕ್ಷಕರು ಪ್ರೋತ್ಸಾಹಿಸಬೇಕು. ಇದರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದಿಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಕಾರಂಜಿಯಂತೆ ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಶಿಕ್ಷಣದ ಜತೆಗೆ ಪ್ರತಿಯೊಬ್ಬ ವಿದ್ಯಾರ್ಥಿಗಳು ವೇದಿಕೆ ಸದುಪಯೋಗ ಪಡೆದುಕೊಂಡು ತಮ್ಮಲ್ಲಿನ ಪ್ರತಿಭೆ ಮೂಲಕ ಸಾಧನೆ ಮಾಡಬೇಕೆಂದು ಹೇಳಿದರು.
ಪುರಸಭೆ ಅಧ್ಯಕ್ಷೆ ಪಾರ್ವತಿಬಾಯಿ ಶೇರಿಕಾರ, ಉಪಾಧ್ಯಕ್ಷ ಮುಕ್ರಂ ಜಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ರವೀಂದ್ರರೆಡ್ಡಿ, ತಾಲೂಕು ಅಧ್ಯಕ್ಷ ಮುರಗೇಂದ್ರ ಸಜ್ಜನಶೆಟ್ಟಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶೇಖ ಮಹಿಬೂಬ್ ಪಟೇಲ್, ತಾಲೂಕು ಅಧ್ಯಕ್ಷ ಶರದಕುಮಾರ ನಾರಾಯಣಪೇಟಕರ್, ಪ್ರಮುಖರಾದ ಸಾರಿಕಾ ಗಂಗಾ, ಶ್ರೀಕಾಂತ ಸೂಗಿ, ಸಿದ್ದಲಿಂಗ ನಿರ್ಣಾ, ವೀರಂತರೆಡ್ಡಿ ಜಂಪಾ, ರಾಜಪ್ಪ ಸಿಂದೋಲ್ ಇತರರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ ಸ್ವಾಗತಿಸಿದರು. ನಂತರ ಶಾಲಾ ಮಕ್ಕಳಿಂದ ವಿವಿಧ ಸ್ಪರ್ಧೆಗಳು ನಡೆದವು.