ಮಕ್ಕಳ ರಕ್ಷಣಾ ನೀತಿ ಪರಿಣಾಮಕಾರಿ ಜಾರಿ

ctd--0001
Published on

ಚಿತ್ರದುರ್ಗ: ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿ ಪರಿಣಾಮಕಾರಿಯಾಗಿ ಜಾರಿಗೆ ತರಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.

ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತಿತರ ಇಲಾಖೆಗಳ ಆಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ರಕ್ಷಣಾ ನೀತಿಯಲ್ಲಿ ಒದಗಿಸಬೇಕಾದ ಮೂಲ ಸೌಕರ್ಯ, ಭದ್ರತೆ, ಮಕ್ಕಳ ಅವರ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು ಮುಂತಾದ ವಿಷಯಗಳ ಕುರಿತು ವಿಶೇಷ ಹಾಗೂ ವಿವರವಾದ ನಿಯಮಗಳಿವೆ. ಇವುಗಳನ್ನು ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದರು.

ಶಾಲೆಗಳು ಕೇವಲ ಶಿಕ್ಷಣ ಕೊಡುವ ಕೇಂದ್ರಗಳಾಗದೆ, ರಕ್ಷಣೆಯನ್ನೂ ಒದಗಿಸುವ ತುರ್ತು ಅಗತ್ಯವಿದೆ. ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ-2009ರ ಅನ್ವಯ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಆಂದೋಲನ ಕುರಿತು ತರಬೇತಿ ನೀಡಲಾಯಿತು.

ಡಿವೈಎಸ್‌ಪಿ ಪಿ.ಕೆ. ದಿನಕರ್, ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಹಾಗೂ ತೆರೆದ ಮನೆ ಕಾರ್ಯಕ್ರಮ ಹಾಗೂ ಶಿಕ್ಷಕ ಸಿ.ಎಲ್. ಏಕನಾಥ್ ಅವರು ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009ರ ಕುರಿತು ಉಪನ್ಯಾಸ ನೀಡಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ. ಶೀಲಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಒ. ಪವಿತ್ರಾ, ಚಳ್ಳಕೆರೆ ಬಿಇಒ ಸುರೇಶ್ ಇನ್ನಿತರ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net