ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ

sp seema latkara
Published on

ಮೈಸೂರು: ರಸ್ತೆಗಳ ಅಂಚಿನಲ್ಲಿರುವ ಶಾಲಾ ಕಾಲೇಜುಗಳಿಂದ ಹೊರಬರುವ ಮಕ್ಕಳಿಗೆ ತೊಂದರೆಯಾಗದಂತೆ ಅವರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.


ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ರಸ್ತೆಗಳಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ನಿಮಿಷಗಳ ಅಂತರದಲ್ಲಿ ತರಗತಿವಾರು ಮಕ್ಕಳನ್ನು ಶಾಲೆಯಿಂದ ಬಿಡಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.


ರಾಷ್ಟ್ರೀಯ ಹೆದ್ದಾರಿ ಹಾಗೂ ಗ್ರಾಮೀಣ ಭಾಗದಲ್ಲಿ 29 ಬ್ಲಾಕ್‌ಸ್ಪಾಟ್‌ಗಳು, ನಗರದಲ್ಲಿ 12 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಮೂರಕ್ಕಿಂತ ಹೆಚ್ಚು ಅಪಘಾತಗಳಾಗುವ ಸ್ಥಳವನ್ನು ಬ್ಲಾಕ್‌ಸ್ಪಾಟ್ ಎಂದು ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಉಂಟಾಗುವ ಅಪಘಾತಗಳನ್ನು ನಿಯಂತ್ರಿಸಲು ಸೂಕ್ತ ರಸ್ತೆ ಸುರಕ್ಷತಾ ವ್ಯವಸ್ಥೆ ಮಾಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.


ಮಾರಣಾಂತಿಕ, ಮಾರಣಾಂತಿಕವಲ್ಲದ ಹಾಗೂ ಸಣ್ಣ ಅಪಘಾತಗಳ ಬಗ್ಗೆಯೂ ಸರಿಯಾದ ಮಾಹಿತಿ ನೀಡಬೇಕು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಚಾಲಕರು ಅತಿ ವೇಗವಾಗಿ ವಾಹನ ಚಲಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಬಹಳ ದೊಡ್ಡ ಮಟ್ಟದ ಅಪಘಾತಗಳಾಗುವ ಸಾಧ್ಯತೆಗಳಿವೆ. ಕೂಡಲೇ ಚಾಲಕರಿಗೆ ಸೂಚನೆಗಳನ್ನು ನೀಡಿ ಅಥವಾ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.


ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ರಾಜು, ಡಿಡಿಪಿಐ ರಾಮಚಂದ್ರ ರಾಜೇ ಅರಸ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳಾದ ಹೇಮಂತ್ ಕುಮಾರ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗಮಲ್ಲೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಪೋಲಿಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net