ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಬೆಳೆಸಲು ಕ್ರಮ

19blrp1.
ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಸಂಭ್ರಮ ಶನಿವಾರ ಕಾರ್ಯಕ್ರಮ ಉದ್ಘಾಟಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಮಾತನಾಡಿದರು. ಹೆಬ್ಬಾಳು ಹಾಲಪ್ಪ, ಪ್ರಸನ್ನ, ಮ.ಶಿವಮೂರ್ತಿ ಇತರರು ಇದ್ದರು.
Published on

ಬೇಲೂರು: ಸರ್ಕಾರದ ಆದೇಶದಂತೆ ಶಿಕ್ಷಣ ಇಲಾಖೆಯಿಂದ ಸಂಭ್ರಮ ಶನಿವಾರ ಕಾರ್ಯಕ್ರಮ ರಾಜ್ಯಾದ್ಯಂತ ಏಕಕಾಲಕ್ಕೆ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೇಲೂರಿನಲ್ಲೂ ಚಾಲನೆ ನೀಡುತ್ತಿದ್ದೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಹೇಳಿದರು.

ಪಟ್ಟಣದ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಆವರಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಸಂಭ್ರಮ ಶನಿವಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳ ಒಂದು ಶನಿವಾರ ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ ಎಂದರು.

2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಕಾರ್ಯ ಚಟುವಟಿಕೆಗಳಲ್ಲಿ ಮಕ್ಕಳನ್ನು ಹೆಚ್ಚು ತೊಡಗಿಸುವ ಮೂಲಕ ಅವರಲ್ಲಿ ಸಾಮಾನ್ಯ ಪ್ರಜ್ಞೆ ಬೆಳೆಸಲು ಕ್ರಮ ಕೈಗೊಳ್ಳಲಾಗುವುದು. ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡಲ್‌ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಈಗಾಗಲೇ ಜಿಲ್ಲಾ, ತಾಲೂಕು, ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರ, ಸಹ ಶಿಕ್ಷಕರ ಮತ್ತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಬ್ಬಾಳು ಹಾಲಪ್ಪ ಮಾತನಾಡಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ, ಕಸಾಪ ಮಾಜಿ ಅಧ್ಯಕ್ಷ ಮ.ಶಿವಮೂರ್ತಿ, ಕ್ಷೇತ್ರ ಸಮನ್ವಯಾಧಿಕಾರಿಕಾರಿ ಶಿವಮರಿಯಪ್ಪ, ಮುಖ್ಯ ಶಿಕ್ಷಕಿ ಪಾರ್ವತಿ, ಸಿಆರ್‌ಪಿ ವಿಜಯ, ಶಿಕ್ಷಕರಾದ ಮಾರುತಿ, ಕೇಶವಮೂರ್ತಿ, ವೆಂಕಟೇಶ್, ಗಾಯತ್ರಿ, ವಿಶ್ವಚಾರ್ಯ, ಬಸವರಾಜು, ವಿಶ್ವನಾಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net