

ಅರಕಲಗೂಡು: ಮಕ್ಕಳಲ್ಲಿ ಪರಿಸರ ಕಳಕಳಿ, ಸಾಮಾಜಿಕ ಮೌಲ್ಯಗಳ ಜತೆಗೆ ಪುಸ್ತಕಗಳ ಮೇಲಿನ ಪ್ರೀತಿ ಬೆಳೆಸುವ ಮೂಲಕ ಸಾಹಿತ್ಯಾಸಕ್ತಿ ಮೂಡಿಸುವುದು ಅತ್ಯಗತ್ಯ ಎಂದು ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿ.ಎನ್.ಅಶೋಕ್ ತಿಳಿಸಿದರು.
ಪಟ್ಟಣದ ಶಿಕ್ಷಕರ ಭವನದಲ್ಲಿ ಗುರುವಾರ ಮಕ್ಕಳ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಸಾಹಿತ್ಯ ಪರಿಷತ್ತು ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಗುರಿ ಹೊಂದಿದೆ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದಾಗ ಭವಿಷ್ಯದಲ್ಲಿ ಸಾಧಕರಾಗಲು ಸಾಧ್ಯವಾಗುತ್ತದೆ. ಮಕ್ಕಳ ಸಾಹಿತ್ಯ ಪರಿಷತ್ತಿನಿಂದ ದೆಹಲಿಯಲ್ಲಿ ರಾಷ್ಟ್ರಮಟ್ಟದಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸುವ ಉದ್ದೇಶ ಇದೆ ಎಂದರು.
ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಕೆ.ಗಂಗಾಧರ್, ಓದುವ ಪ್ರವೃತ್ತಿ ಕೇವಲ ಪಠ್ಯ ಪುಸ್ತಕಗಳಿಗಷ್ಟೇ ಸೀಮಿತಗೊಂಡಿದೆ. ಸಾಹಿತ್ಯ, ಓದುವ ಅಭಿರುಚಿಯನ್ನು ಪಾಲಕರು, ಮಕ್ಕಳಲ್ಲಿ ಮೂಡಿಸಬೇಕು ಎಂದರಲ್ಲದೆ, ಮೊಬೈಲ್ ಗೀಳಿನಿಂದ ಪುಸ್ತಕ ಪ್ರೀತಿ ಮರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ವೇಳೆ ತಾಲೂಕು ಘಟಕದ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅನಿಲ್‌ಗೌಡ, ಮಾಜಿ ಅಧ್ಯಕ್ಷ ವಿಷ್ಣುಪ್ರಕಾಶ್, ಜಾನಪದ ಪರಿಷತ್ತು ತಾಲೂಕು ಅಧ್ಯಕ್ಷ ದೇವಾನಂದ ವರಪ್ರಸಾದ್ ಮಾತನಾಡಿದರು. ಪರಿಷತ್ತು ತಾಲೂಕು ಘಟಕದ ಅಧ್ಯಕ್ಷ ಅ.ರಾ.ಸುಬ್ಬರಾವ್ ಅಧ್ಯಕ್ಷತೆ ವಹಿಸಿದ್ದರು. ಬಿಇಒ ದೇವರಾಜ್, ಬಿಆರ್‌ಸಿ ಬಾಲರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲೋಕೇಶ್, ಹಾಸನ ಪಿಯು ಕಾಲೇಜಿನ ಪ್ರಾಂಶುಪಾಲ ಪಿ.ನವೀನ್ ಉಲಿವಾಲ, ನಾವು ಪ್ರತಿಷ್ಠಾನದ ಸುಮನಾ ಗೌತಮ್ ಇದ್ದರು.