ಮಕ್ಕಳಿಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

IMG-20230821-WA0319
ಆಲೂರು ವಿಶ್ವೇಶ್ವರಯ್ಯ ಪಬ್ಲಿಕ್ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ಆಯೋಜಿಸಲಾಗಿತ್ತು. ರವಿ, ಎಚ್.ವಿ.ನಾಗಭೂಷಣ, ಸಿ.ಎಸ್.ಪೂರ್ಣಿಮಾ ಇದ್ದರು.
Published on

ಆಲೂರು: ಪ್ರತಿಭಾ ಕಾರಂಜಿಯು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಹಪಠ್ಯ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬಹುದು ಎಂಬುದಕ್ಕೆ ಇದು ಪೂರಕವಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಬಿ.ಬಿ. ರವಿ ತಿಳಿಸಿದರು.

ಪಟ್ಟಣದ ವಿಶ್ವೇಶ್ವರಯ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಭಾ ಕಾರಂಜಿಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬಹಳ ಪ್ರಮುಖವಾಗಿದೆ. ಮಕ್ಕಳು ಪಠ್ಯ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳ ಕಡೆಗೆ ಒಲವು ಮೂಡಿಸಲು ಪ್ರತಿಭಾ ಕಾರಂಜಿಯು ಉತ್ತಮ ವೇದಿಕೆಯಾಗಿದೆ ಎಂದರು.

ವಿಶ್ವೇಶ್ವರ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಎಚ್.ವಿ.ನಾಗಭೂಷಣ್ ಮಾತನಾಡಿ, ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಯ ಕಲಿಕಾ ಸಾಮರ್ಥ್ಯ ಮತ್ತಷ್ಟು ವೃದ್ಧಿಯಾಗುತ್ತದೆ ಎಂಬ ಪರಿಕಲ್ಪನೆಯಲ್ಲಿ ಹಲವು ಮಟ್ಟದಲ್ಲಿ ಈ ಸ್ಪರ್ಧಾ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಟ್ಟಣದ ಸರ್ಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮುಖ್ಯಶಿಕ್ಷಕಿ ಸಿ.ಎಸ್.ಪೂರ್ಣಿಮಾ, ಇಸಿಒಗಳಾದ ರುದ್ರೇಶ್, ಅಶ್ವತ್ಥ್, ತಿಮ್ಮಶೆಟ್ಟಿ, ಮಂಜುಳಾ, ಸಿಆರ್‌ಪಿ ಸುಮಾ ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net