ಮಣಗಳ್ಳಿ ಗ್ರಾ.ಪಂನಲ್ಲಿ ಅಭಿವೃದ್ಧಿ ಕಾರ್ಯ

Published on

ಹನೂರು: ಕಳೆದ ಒಂದು ವರ್ಷದ ಅವಧಿಯಲ್ಲಿ ನರೇಗಾ ಯೋಜನೆಯಡಿ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 207 ಕಾಮಗಾರಿಗಳು ನಡೆದಿದ್ದು, 1.39 ಕೋಟಿ ರೂ. ಅನುದಾನ ಖರ್ಚು ಮಾಡಲಾಗಿದೆ ಎಂದು ನರೇಗಾ ತಾಲೂಕು ಸಂಯೋಜಕ ನಾರಾಯಣ್ ತಿಳಿಸಿದರು.

ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ನರೇಗಾ ಯೋಜನೆಯ ಸಾಮಾಜಿಕ ಲೆಕ್ಕ ತಪಾಸಣಾ ಹಾಗೂ 15ನೇ ಹಣಕಾಸು ಯೋಜನೆಯ ಗ್ರಾಮಸಭೆಯಲ್ಲಿ ಮಾತನಾಡಿದರು. ನರೇಗಾ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣ, ದನದ ಕೊಟ್ಟಿಗೆ, ಜಮೀನು, ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ, ಕೆರೆ ಅಭಿವೃದ್ಧಿ ಸೇರಿದಂತೆ ಇನ್ನಿತರ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಈ ಯೋಜನೆಯಡಿ ಮಣಗಳ್ಳಿ ಗ್ರಾಪಂ ವತಿಯಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ವಸತಿ ಯೋಜನೆಗೆ ಅನುದಾನ, ಹೂಳೆತ್ತುವ ಕಾಮಗಾರಿ. ಕೊಟ್ಟಿಗೆ ನಿರ್ಮಾಣ, ಸಿಸಿ ರಸ್ತೆ, ಚರಂಡಿ, ಚೆಕ್‌ಡ್ಯಾಂ ನಿರ್ಮಾಣ, ಮೆಟ್ಲಿಂಗ್ ರಸ್ತೆ, ಕೆರೆ ಅಭಿವೃದ್ಧಿ ಹಾಗೂ ಅರಣ್ಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಕಾಮಗಾರಿಗಳು ಸೇರಿದಂತೆ ಒಟ್ಟು 207 ಕಾಮಗಾರಿಗಳು ನಡೆದಿದ್ದು, ಕೂಲಿ ವೆಚ್ಚ 84,94,846 ರೂ. ಹಾಗೂ ಸಾಮಗ್ರಿ ವೆಚ್ಚ 54,43,066 ರೂ. ಸೇರಿದಂತೆ 1,39,37,912 ರೂ. ಅನುದಾನ ಖರ್ಚು ಮಾಡಲಾಗಿದೆ. ನಡೆದಿರುವ ಕಾಮಗಾರಿಗಳನ್ನು ಈಗಾಗಲೇ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿದೆ. ಆದ್ದರಿಂದ ಆಕ್ಷೇಪಣೆಗಳಿದ್ದಲ್ಲಿ ಗ್ರಾಮಸ್ಥರು ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಪಿಡಿಒ ರಾಮು ಮಾತನಾಡಿ, ನರೇಗಾ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರಲ್ಲಿ ಪ್ರತಿ ಕುಟುಂಬವೂ ಉದ್ಯೋಗವನ್ನು ಪಡೆಯಬಹುದಾಗಿದೆ. ಇದರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದ್ದು, ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳವುದರ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಬಳಿಕ ಸಭೆಯಲ್ಲಿ 15ನೇ ಹಣಕಾಸು ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಖರ್ಚು ವೆಚ್ಚದ ವಿವರವನ್ನು ಮಂಡಿಸಲಾಯಿತು. ಗ್ರಾಪಂ ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷೆ ಚಿಕ್ಕವೆಂಕಟಮ್ಮ, ಸದಸ್ಯರಾದ ಲತಾ, ಕುಮಾರ್, ಮಹದೇವ, ಜಯಣ್ಣ, ಸಿಆರ್‌ಪಿ ದೊಡ್ಡಸಿದ್ದಶೆಟ್ಟಿ, ಕಾರ್ಯದರ್ಶಿ ನಾಗರಾಜಮೂರ್ತಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net