ಮಣಿಪುರ ಘಟನೆ ಖಂಡಿಸಿ ಪ್ರತಿಭಟನೆ

28kglphoto-2.,,,,
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕರವೇ (ಪ್ರವೀಣ್ ಶೆಟ್ಟಿ) ಪದಾಧಿಕಾರಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪತ್ರಿಭಟನೆ ಮೆರವಣಿಗೆ ನಡೆಸಿದರು. ಆರ್.ಮೋಹನ್, ರಿಯಾಜ್ ಅಹಮ್ಮದ್, ಅವಿನಾಶ್ ಇತರರು ಇದ್ದರು.
Published on

ಕೊಳ್ಳೇಗಾಲ: ಮಣಿಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ, ಅತ್ಯಾಚಾರ ಹಾಗೂ ಹಿಂಸಾಚಾರಕ್ಕೆ ಬಲಿಯಾಗುತ್ತಿರುವ ಮಣಿಪುರದ ಕುಕ್ಕಿ ಸಮುದಾಯಕ್ಕೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ಪ್ರವೀಣ್ ಶೆಟ್ಟಿ ಬಣ) ತಾಲೂಕು ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಗುರುಕಾರ್ ವೃತ್ತದಿಂದ ಪ್ರಮುಖ ರಸ್ತೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ತಾಲೂಕು ಕಚೇರಿ ಮುಂಭಾಗ ಸಮಾವೇಶಗೊಂಡರು. ಸ್ಥಳಕ್ಕಾಗಮಿಸಿದ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ಅತ್ಯಾಚಾರ ಎಸಗಿರುವುದು ಮಾನವ ಕುಲವೇ ತಲೆತಗ್ಗಿಸುವ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ 78 ದಿನಗಳಿಂದ ಹಿಂಸಾಚಾರ ನಡೆಯುತ್ತಿದೆ. ಆದರೆ, ಕೇಂದ್ರ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲಾಗುತ್ತಿಲ್ಲ. ಹಿಂಸಾಚಾರ ತೀವ್ರವಾಗಿದ್ದರೂ ಪ್ರಧಾನಿ ಮೌನವಾಗಿದ್ದಾರೆ. ಇಂದಿಗೂ ಮಣಿಪುರಕ್ಕೆ ಭೇಟಿ ಮಾಡುವ ಪ್ರಯತ್ನವನ್ನೇ ಮಾಡಲಿಲ್ಲ ಎಂದು ಖಂಡಿಸಿದರು.

ಹಿಂಸಾಚಾರದಿಂದ ಈಗಾಗಲೇ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹಲವರಿಗೆ ಗಾಯಗಳಾಗಿವೆ. ಸಾವಿರಾರು ಜನರು ಬೇರೆ ಸ್ಥಳಗಳಿಗೆ ಪಲಾಯನಗೊಂಡಿದ್ದಾರೆ. ಮಹಿಳೆಯರು ಹಾಗೂ ದುರ್ಬಲ ಸಮುದಾಯಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಕೂಡಲೇ ವಿಶೇಷ ತನಿಖಾ ತಂಡ ರಚಿಸಿ, ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಜಿಲ್ಲಾಧ್ಯಕ್ಷ ಆರ್.ಮೋಹನ್, ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹಮ್ಮದ್, ಗೌರವಾಧ್ಯಕ್ಷ ಸಮೀಷರೀಷ್, ಕರವೇ ತಾಲೂಕು ಅಧ್ಯಕ್ಷ ಅವಿನಾಶ್, ಪ್ರಧಾನ ಕಾರ್ಯದರ್ಶಿ ಎಸ್.ವಿನೋದ್, ಉಪಾಧ್ಯಕ್ಷ ಮಂಜುನಾಥ್, ಕಾರ್ಯಾಧ್ಯಕ್ಷ ಆಯಾಜ್, ಟೌನ್ ಅಧ್ಯಕ್ಷ ಜಗದೀಶ್, ಯೂನುಸ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net