

ನಂಜನಗೂಡು: ತಾಲೂಕಿನ ಚಿನ್ನದಗುಡಿಹುಂಡಿ ಗ್ರಾಮದ ಬಳಿ ಹಾದು ಹೋಗಿರುವ ಕಬಿನಿ ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಣೆ ಮಾಡುತ್ತಿದ್ದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕರ್ನಾಟಕ ಅಂಬೇಡ್ಕರ್ ಸೇನೆ ಅಧ್ಯಕ್ಷ ಬಸವಟ್ಟಿಗೆ ನಾಗೇಂದ್ರ, ತಾಲೂಕು ಅಧ್ಯಕ್ಷ ಮುಳ್ಳೂರು ಸ್ವಾಮಿ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಅನುಮತಿ ಇಲ್ಲದೆ ಅಕ್ರಮವಾಗಿ ಮಣ್ಣು ಸಾಗಣೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಹನಗಳನ್ನು ವಶಕ್ಕೆ ಪಡೆದು ಕವಲಂದೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ರಾಜ್ಯಾಧ್ಯಕ್ಷ ಬಸವಟ್ಟಿಗೆ ನಾಗೇಂದ್ರ ಮಾತನಾಡಿ, ರಾಜಕೀಯ ಮುಖಂಡನೊಬ್ಬ ಅಕ್ರಮವಾಗಿ ಮಣ್ಣು ಸಾಗಣೆ ಮಾಡುತ್ತಿದ್ದಾರೆ. ಇವರೊಂದಿಗೆ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ. ಪ್ರಕರಣ ದಾಖಲಿಸಲು ಅಧಿಕಾರಿಗಳು, ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಸೂಕ್ತ ಕ್ರಮ ಕೈಗೊಂಡು ದೂರು ದಾಖಲಿಸಲು. ಇಲ್ಲದಿದ್ದರೆ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.