ಮತದಾನ ಪ್ರತಿಯೊಬ್ಬ ಪ್ರಜೆಯ ಹಕ್ಕು

25 HANUR 3 (1)
Published on

ಹನೂರು: ಮತದಾನ ಪ್ರತಿಯೊಬ್ಬ ಪ್ರಜೆಯ ಹಕ್ಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಲು ಸಹಕರಿಸಬೇಕು ಎಂದು ತಹಸೀಲ್ದಾರ್ ಆನಂದಯ್ಯ ತಿಳಿಸಿದರು.


ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದ ಸಭಾಂಗಣದಲ್ಲಿ ಬುಧವಾರ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಚುನಾವಣೆ ಅಯೋಗವು ಮತದಾನದ ಕುರಿತು ಜನರಲ್ಲಿ ಅರಿವು ಮೂಢಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅಲ್ಲದೇ 2011ರಿಂದ ಮತದಾರರ ದಿನಾಚರಣೆಯನ್ನು ನಡೆಸಲಾಗುತ್ತಿದ್ದು, ಮತದಾನದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಈ ಹಿಂದೆ ವರ್ಷಕ್ಕೊಮ್ಮೆ ಮಾತ್ರ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿತ್ತು. ಇದರಿಂದ ಕೆಲವರು ಹೆಸರುಗಳು ಪಟ್ಟಿಯಿಂದ ಬಿಟ್ಟು ಹೋಗುತ್ತಿದ್ದವು. ಜತೆಗೆ ತಿದ್ದುಪಡಿಯಲ್ಲೂ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ಈ ಬಾರಿಯಿಂದ ಪ್ರತಿ 3 ತಿಂಗಳಿಗೊಮ್ಮೆ 4 ಬಾರಿ ಪರಿಷ್ಕರಣೆ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ 18 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.


ಇದಕ್ಕೂ ಮುನ್ನ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಗ್ರೇಡ್ 2 ತಹಸೀಲ್ದಾರ್ ಧನಂಜಯ, ಶಿರಸ್ತೆದಾರ್ ನಾಗೇಂದ್ರ, ತಾಪಂ ಇಒ ಶ್ರೀನಿವಾಸ್, ಆರ್‌ಐ ಮಹದೇವಸ್ವಾಮಿ, ಗ್ರಾಮಲೆಕ್ಕಿಗರಾದ ಶೇಷಣ್ಣ, ರಾಜು, ಕಂದಾಯ ಇಲಾಖೆಯ ನೌಕರರು, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net