

ವಿಜಯವಾಣಿ ಸುದ್ದಿಜಾಲ ಧಾರವಾಡ:: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ. 100ರಷ್ಟು ಮತದಾನವಾಗಬೇಕು. ಮತದಾರ ಜಾಗೃತಿಗಾಗಿ ಪರಿಣಾಮಕಾರಿ ಕಾರ್ಯಕ್ರಮ ಆಯೋಜಿಸಲು ಕ್ರಿಯಾ ಯೋಜನೆ ಸಿದ್ಧಗೊಳಿಸುವಂತೆ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಚುನಾವಣಾ ಜಾಗೃತಿಗಾಗಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು ಹಿಂದಿನ ಚುನಾವಣೆಗಳಲ್ಲಿ ಮತದಾನ ಕಡಿಮೆಯಾದ ಕೇಂದ್ರಗಳಿಗೆ ಭೇಟಿ ನೀಡಿ ಕಾರಣ ತಿಳಿಯಬೇಕು. ಮುಂದಿನ ಚುನಾವಣೆಯಲ್ಲಿ ಎಲ್ಲ ಮತಗಟ್ಟಗಳಲ್ಲಿ ನೋಂದಾಯಿತ ಮತದಾರರು ಮತ ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು. ಕಡಿಮೆ ಮತದಾನವಾದ ಕೇಂದ್ರಗಳಲ್ಲಿ ಕನಿಷ್ಠ ಶೇ.10ರಷ್ಟು ಮತದಾನ ಹೆಚ್ಚಳವಾಗುವಂತೆ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿನ 18 ವರ್ಷ ತುಂಬಿದ ಮತ್ತು 19 ವರ್ಷದೊಳಗಿನ ಅನೇಕರು ಮತದಾರ ಪಟ್ಟಿಗೆ ಸೆರ್ಪಡೆ ಆಗಿಲ್ಲ. ಪ್ರತಿ ವಯಸ್ಕ ಮತದಾರರನ್ನು ಪಟ್ಟಿಗೆ ಸೇರಿಸುವ ಮತ್ತು ಮತದಾನ ಮಾಡುವಂತೆ ಕ್ರಮವಹಿಸಬೇಕು ಎಂದರು.
ಜಿಪಂ ಯೋಜನಾ ನಿರ್ದೇಶಕ ಬಿ.ಎಸ್. ಮೂಗನೂರಮಠ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿಶಿ ಪಾಟೀಲ, ಶಾಲಾ ಸಾಕ್ಷರತೆ ಮತ್ತು ಸುಧಾರಣೆ ಇಲಾಖೆ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣ ನಾಯ್ಕ, ಅಲ್ಪ ಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ, ಜಿಲ್ಲಾ ಸ್ವೀಪ್ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಸಂಪನ್ಮೂಲ ವ್ಯಕ್ತಿ ಕೆ.ಎಂ.ಶೇಖ, ವಿವಿಧ ಇಲಾಖೆ ಅಧಿಕಾರಿಗಳು, ಇತರರು ಇದ್ದರು.