ಹಾಸನ: ಮುಂಬರುವ 2023ನೇ ವಿಧಾನಸಭೆ ಚುನಾವಣೆಯಲ್ಲಿ ವಾಮಮಾರ್ಗದಿಂದ ಗೆಲ್ಲುವ ಉದ್ದೇಶದಿಂದ ಹಾಸನ ಜಿಲ್ಲೆಯಲ್ಲೂ ಮತದಾರರ ಪಟ್ಟಿಯಿಂದ ಸಾವಿರಾರು ಹೆಸರುಗಳನ್ನು ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಎಂ.ಬಿ. ದಿನೇಶ್ ಗಂಭೀರ ಆರೋಪ ಮಾಡಿದರು.
ಹಾಸನ ವಿಧಾನಸಭಾ ಕ್ಷೇತ್ರವೊಂದರಲ್ಲೇ 15,227 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಈ ರೀತಿಯ ಅಕ್ರಮ ಜಿಲ್ಲಾದ್ಯಂತ ನಡೆದಿದ್ದು, ಸುಮಾರು 80 ಸಾವಿರದಿಂದ 1 ಲಕ್ಷ ಮತದಾರರ ಹೆಸರು ಇಲ್ಲವಾಗಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ದೂರು ನೀಡುವುದಾಗಿ ಗುರುವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಇದು ಭ್ರಷ್ಟ ಬಿಜೆಪಿ ಸರ್ಕಾರದ ಮತ್ತೊಂದು ಹೀನ ಕೃತ್ಯವಾಗಿದೆ. ಬಿಜೆಪಿಗೆ ಮತ ಹಾಕದವರ ಹೆಸರುಗಳನ್ನು ಹುಡುಕಿ ಮತದಾರರ ಪಟ್ಟಿಯಿಂದ ಕಿತ್ತುಹಾಕಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಪಕ್ಷ 150-170 ಸ್ಥಾನಗಳನ್ನು ಗಳಿಸಿ ಸರ್ಕಾರ ರಚಿಸುವುದು ಖಚಿತವಾಗಿರುವುದರಿಂದ ಅದನ್ನು ತಡೆಯಲು ಬಿಜೆಪಿ ಸರ್ಕಾರ ಈ ವಾಮಮಾರ್ಗ ಅನುಸರಿಸುತ್ತಿದೆ ಎಂದು ದೂರಿದರು.
ಕಾಂಗ್ರೆಸ್ ಸೇವಾದಳದ ಕಾರ್ಯಕರ್ತರು ಹಳ್ಳಿಹಳ್ಳಿಗಳಲ್ಲಿ ಸಂಚರಿಸಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹೆಸರುಗಳನ್ನು ಮತ್ತೆ ಪಟ್ಟಿಗೆ ಸೇರಿಸುವ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಸೇವಾದಳದ ರಾಜ್ಯ ಉಪಾಧ್ಯಕ್ಷ ಮರ್ಕುಲಿ ಗೋಪಾಲೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರ್, ಜಗದೀಶ್ ಇತರರು ಇದ್ದರು.