

ಚಾಮರಾಜನಗರ: ಜಿಲ್ಲೆಯಲ್ಲಿರುವ ಕಾಡಂಚಿನ ಪ್ರದೇಶಗಳು, ಗಿರಿಜನರ ಹಾಡಿಗಳು, ಕಾಲನಿಗಳಲ್ಲಿನ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ನೊಂದಣಿ ಮತ್ತು ಮತದಾರರ ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ನೊಂದಾಯಿತ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಂಗಳವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂತರ್ಜಾಲವಿಲ್ಲದ ಮತಗಟ್ಟೆಗಳ ವಿವರ ಒದಗಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರು, ದುರ್ಬಲರು, ವಿಶೇಷ ಚೇತನರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರಿಸಲು ಸಹಕಾರ ನೀಡಬೇಕು. ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆಯ ಮಹತ್ತರ ಕಾರ್ಯದ ಯಶಸ್ವಿಗೆ ಸಹಕರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳಲ್ಲಿ ಮನವಿ ಮಾಡಿದರು.
ಜಿಲ್ಲೆಯಲ್ಲಿ ದೋಷರಹಿತ ಮತದಾರರ ಪಟ್ಟಿ ತಯಾರಿಸಲು ಹಾಗೂ ಮತದಾನದ ಶೇಖಡಾವಾರು ಪ್ರಮಾಣವನ್ನು ಹೆಚ್ಚಿಸಲು ಸಹಕರಿಸುವಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಪ್ರತಿ ವರ್ಷ ಜ.1, ಏ.1, ಜು.1 ಹಾಗೂ ಅ.1ರಂದು ಅರ್ಹತಾ ದಿನಗಳೆಂದು ಪರಿಗಣಿಸಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಕೈಗೊಳ್ಳಲಾಗುತ್ತದೆ. ಈ ಅವಧಿಯಲ್ಲಿ 18 ವರ್ಷ ತುಂಬಿದ ಯುವ ಮತದಾರರು ಹಾಗೂ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸುವ ಪರಿಷ್ಕರಣಾ ಕಾರ್ಯಕ್ಕೆ ನೆರವಾಗಬೇಕು ಎಂದರು.
ಜಿಲ್ಲೆಯಲ್ಲಿ ಒಟ್ಟು 983 ಮತಗಟ್ಟೆಗಳಿದ್ದು, 432291 ಪುರುಷರು, 447983 ಮಹಿಳೆಯರು ಹಾಗೂ 56 ಇತರರು ಸೇರಿದಂತೆ ಒಟ್ಟು 880630 ಮತದಾರರಿದ್ದಾರೆ. ಮತದಾರರ ಪಟ್ಟಿಗೆ ಯುವ ಮತದಾರರನ್ನು ನೊಂದಣಿ ಮಾಡಲು ನಮೂನೆ-6ರಲ್ಲಿ ಸಂಬಂಧಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ) ಹಾಗೂ ಆಯಾ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅಥವಾ ವೋಟರ್ ಹೆಲ್ಪ್‌ಲೈನ್ ಅಪ್ (ವಿ.ಎಚ್.ಎ) ಮತ್ತು ವೆಬ್‌ಸೈಟ್ ಠಿಠಿ://ಟಠಿಛ್ಟಿ.ಛ್ಚಿಜಿ.ಜಟ.ಜ್ಞಿ ನಲ್ಲಿ ಆನ್‌ಲೈನ್ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಚುನಾವಣಾ ಶಿರಸ್ತೇದಾರ್ ಬಸವರಾಜು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.