

ಹಾಸನ: ಮತಾಂತರ ನಿಷೇಧ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆಯಬಾರದು ಎಂದು ತಣ್ಣೀರುಹಳ್ಳ ಮಠದ ಮಠಾಧೀಶರಾದ ವಿಜಯ್ ಕುಮಾರ್ ಸ್ವಾಮೀಜಿ ಹಾಗೂ ಕಲ್ಮಠದ ಮಹಾಂತ ಸ್ವಾಮೀಜಿ ಒತ್ತಾಯಿಸಿದರು.
ನಗರದಲ್ಲಿ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಮೀಜಿಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮತಾಂತರ, ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಅವುಗಳನ್ನು ಈಗ ಕಾಂಗ್ರೆಸ್ ಸರ್ಕಾರ ವಿಧಾನಸಭೆಯಲ್ಲಿ ಇಟ್ಟು ವಾಪಸ್ ಪಡೆಯಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಈ ಕಾಯ್ದೆಗಳನ್ನು ಹಿಂಪಡೆಯಬಾರದು ಎಂದು ಆಗ್ರಹಿಸಿದರು.
ಗೋವುಗಳು ಹಿಂದೂಗಳ ದೈವ ಸ್ವರೂಪಿ. ಆರಾಧ್ಯ ದೈವ. ಅವುಗಳ ಹತ್ಯೆ ಮಾಡಲು ಅವಕಾಶ ನೀಡುವುದು ಅಪರಾಧ. ಆದ್ದರಿಂದ ಈ ಕಾಯ್ದೆಗಳನ್ನು ವಾಪಸ್ ಪಡೆದು ಗೋ ಹತ್ಯೆಗೆ ಅವಕಾಶ ನೀಡಬಾರದು. ಒಂದು ವೇಳೆ ಕಾಯ್ದೆಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದರೆ ವಿಧಾನಸೌಧದ ಎದುರು ಎಲ್ಲ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಸಹ ಮತ ನೀಡಿದ್ದಾರೆ. ಅವರ ಮತದಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೇ ಹೊರತು ಕೇವಲ ಅಲ್ಪಸಂಖ್ಯಾತರಿಂದಲ್ಲ. ಕಾಂಗ್ರೆಸ್ ಸರ್ಕಾರ ಈ ಕಾಯ್ದೆಗಳನ್ನು ಹಿಂಪಡೆದರೆ ಹಿಂದು ಸಮಾಜಕ್ಕೆ ದ್ರೋಹ ಬಗೆದಂತಾಗುತ್ತದೆ ಎಂದು ಹೇಳಿದರು.