

ಮಳವಳ್ಳಿ: ತಾಲೂಕಿನ ಕಂದೇಗಾಲ ಮತ್ತು ಕಲ್ಲುವೀರನಹಳ್ಳಿ ಗ್ರಾಮಗಳ ನಡುವೆ ಇರುವ ಇತಿಹಾಸ ಪ್ರಸಿದ್ಧ ಮತ್ತಿತಾಳೇಶ್ವರ ದೇವಸ್ಥಾನದಲ್ಲಿ ಸೋಮವಾರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಈ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ಅರ್ಚಕರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ನಂತರ ಮತ್ತಿತಾಳೇಶ್ವರ ಸ್ವಾಮಿಯ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಆವರಣದಲ್ಲಿ ಸಿದ್ಧಪಡಿಸಲಾಗಿದ್ದ ರಥಕ್ಕೆ ಮಂಗಳವಾದ್ಯದೊಡನೆ ಹೊತ್ತು ತಂದು ಪ್ರತಿಷ್ಠಾಪಿಸಲಾಯಿತು.
ತಹಸೀಲ್ದಾರ್ ಕೆ.ಎನ್.ಲೋಕೇಶ್ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ನೆರೆದಿದ್ದ ಸಹಸ್ರಾರು ಭಕ್ತರು ಜಯಘೋಷಗಳೊಡನೆ ಬ್ರಹ್ಮರಥವನ್ನು ದೇವಸ್ಥಾನದ ಸುತ್ತಲೂ ಎಳೆದು ಸಾಗಿದರು. ನವ ವಧು-ವರರು ಹಾಗೂ ಹರಕೆ ಹೊತ್ತ ಭಕ್ತರು ಹಣ್ಣು-ದವನ ಎಸೆದು ಭಕ್ತಿ ಸಮರ್ಪಿಸಿದರು. ಶಾಸಕ ಡಾ.ಕೆ.ಅನ್ನದಾನಿ, ಮಾಜಿ ಶಾಸಕರಾದ ನರೇಂದ್ರಸ್ವಾಮಿ, ಬಿ.ಸೋಮಶೇಖರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಪೂಜೆ ಸಲ್ಲಿಸಿ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದರು.