

ಕಲಬುರಗಿ: ಕಳೆದ ಜೂನ್, ಆಗಸ್ಟ್ ಹಾಗೂ ಅಕ್ಟೋಬರ್‌ನಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಪ್ರಮುಖ ವಾಣಿಜ್ಯ ಬೆಳೆ ತೊಗರಿ ಶೇ.೬೦ಕ್ಕೂ ಅಧಿಕ ಇಳುವರಿ ನಷ್ಟ ಸಂಭವಿಸಿದೆ. ಹೀಗಾಗಿ ತೊಗರಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಶೇ.೨೫ ಮಧ್ಯಂತರ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯಲ್ಲಿ ಮಾತನಾಡಿ, ನ.೫ರೊಳಗೆ ಕೃಷಿ, ಕಂದಾಯ, ತೋಟಗಾರಿಕೆ ಹಾಗೂ ವಿಮಾ ಕಂಪನಿ ಅಧಿಕಾರಿಗಳು ಜಿಲ್ಲಾದ್ಯಂತ ಜಂಟಿಯಾಗಿ ತೊಗರಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕು. ಬೆಳೆ ಸಮೀಕ್ಷೆ ಮಾಡುವಾಗ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ೧೦ರಂತೆ ಬೆಳೆ ಪ್ರದೇಶ ರ‍್ಯಾಂಡಮ್ ಆಗಿ ಪ್ರಯೋಗಕ್ಕೆ ಒಳಪಡಿಸಬೇಕು. ಪಾರದರ್ಶಕ ಮತ್ತು ನಿಖರವಾಗಿ ಬೆಳೆ ಸಮೀಕ್ಷೆ ಕೈಗೊಳ್ಳುವಂತೆ ಎಂದು ಸೂಚನೆ ನೀಡಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ ಮಾತನಾಡಿ, ಮಳೆರಾಯನ ಅವಕೃಪೆಯಿಂದ ಜಿಲ್ಲೆಯಲ್ಲಿ ತೊಗರಿ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿ ರೈತ ಸಮುದಾಯ ಸಂಕಷ್ಟದಲ್ಲಿದೆ. ಮಧ್ಯಂತರ ಪರಿಹಾರಕ್ಕೆ ಸರ್ಕಾರಕ್ಕೆ ಕೋರಬೇಕು ಎಂದು ಹೇಳಿದರು.
ಕೃಷಿ ಉಪನಿರ್ದೇಶಕ ಸೋಮಶೇಖರ ಬಿರಾದಾರ, ತೋಟಗಾರಿಕೆ ಉಪ ನಿರ್ದೇಶಕ ಸಂತೋಷ ಇನಾಮದಾರ್, ಲೀಡ್ ಬ್ಯಾಂಕ್ ಮಾನ್ಯೇಜರ್ ಸದಾಶಿವ ರಾತ್ರಿಕರ್, ವಿಮಾ ಕಂಪನಿ ಪ್ರತಿನಿಧಿಗಳು ಪಾಲ್ಗೊಂಡಿದ್ದರು.