ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ

6NGD1
ನಂಜನಗೂಡಿನಲ್ಲಿ ರೈತ ಸಂಘದ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್‌ರಿಗೆ ಮನವಿ ಸಲ್ಲಿಸಿದರು.
Published on

ನಂಜನಗೂಡು: ತಾಲೂಕು ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ವ್ಯಾಪಕವಾಗಿದ್ದು, ಭ್ರಷ್ಟಾಚಾರದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ತಕ್ಷಣ ಮಧ್ಯಪ್ರವೇಶಿಸಿ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿ ಸಾಮೂಹಿಕ ನಾಯಕತ್ವ ರೈತ ಸಂಘಟನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿ ಮುಂಭಾಗ ಸಂಘಟಿತರಾದ ಪ್ರತಿಭಟನಾಕಾರರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್ ಮಾತನಾಡಿ, ಸಂಜೆ 7ರವರೆಗೂ ಕೆಲ ಅಧಿಕಾರಿಗಳು ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಾರೆ. ಈ ಸಂದರ್ಭ ಮಧ್ಯವರ್ತಿಗಳೂ ಕಚೇರಿಯಲ್ಲಿ ಉಪಸ್ಥಿತರಿರುತ್ತಾರೆ. ರಾತ್ರೋರಾತ್ರಿ ಭೂ ದಾಖಲೆಗಳನ್ನು ತಿದ್ದುಪಡಿ ಮಾಡಿ ಹಣ ಪಡೆದು ಮಂಜೂರಾತಿ ಪತ್ರ ನೀಡಲಾಗಿದೆ. ಈ ಬಗ್ಗೆ ಅನುಮಾನವಿದ್ದಲ್ಲಿ ತಾಲೂಕು ಕಚೇರಿಯಲ್ಲಿ ಅಳವಡಿಸಿರುವ ಸಿಸಿ ಟಿವಿ ಮೂಲಕ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ದೊಡ್ಡ ಉದ್ಯೋಗದಲ್ಲಿರುವ ಹಾಗೂ ಕೆಲ ಅನರ್ಹ ರೈತರಿಗೆ ನಂಜನಗೂಡಿನಲ್ಲಿ ಭೂ ಮಂಜೂರಾತಿ ಮಾಡಲಾಗಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಬಳಿಕ ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಶಿವಮೂರ್ತಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು. ರೈತರ ದೂರುಗಳನ್ನು ಗಂಭೀರವಾಗಿ ಪರಿಗಣಿಸುವ ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಧರಣಿ ಕೈಬಿಟ್ಟರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಸಂಚಾಲಕ ಜಿ.ಮಂಜುನಾಥ್, ದಸಂಸ ಸಂಚಾಲಕ ಮಲ್ಲಹಳ್ಳಿ ನಾರಾಯಣ್, ಹರತಲೆ ಕೆಂಪಣ್ಣ, ಶಿವಕುಮಾರ್,ಪುಟ್ಟನಾಯಕ,ಮಹೇಶ್, ನಾಗರಾಜು, ಶಿವಣ್ಣ ಮುಂತಾದವರು ಭಾಗವಹಿಸಿದ್ದರು.

ರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net