

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಪ್ರಯುಕ್ತ ಆರೋಗ್ಯ ಸಮಸ್ಯೆಗಳ ಕುರಿತು ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ಮನೆಮನೆ ಆರೋಗ್ಯ ಸಮೀಕ್ಷೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯ, ಸರ್ಕಾರಿ ಯೋಗ ಹಾಗೂ ಪ್ರಾಕೃತಿಕ ಚಿಕಿತ್ಸಾ ಮಹಾವಿದ್ಯಾಲಯ ಸಹಯೋಗದಲ್ಲಿ ಈ ಸಮೀಕ್ಷೆ ಕಾರ್ಯ ನಡೆಯಲಿದೆ.
ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ಸರ್ವರ ಆರೋಗ್ಯವನ್ನು ಕಾಪಾಡಲು ಆಯೋಜಿಸಿರುವ ಸಮೀಕ್ಷೆ 9 ದಿನಗಳ ಕಾಲ ಜರುಗಲಿದೆ. ಸೆ.17ರಂದು ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದರು.
ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಗೆ ಬರುವ ಸುಮಾರು 70 ಸಾವಿರಕ್ಕೂ ಹೆಚ್ಚು ಮನೆಗಳಿಗೆ ತೆರಳಿ ಆರೋಗ್ಯ ಸಮೀಕ್ಷೆ ಮಾಡಲಾಗುವುದು. ಸುಮಾರು 500ಕ್ಕೂ ಹೆಚ್ಚು ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. ಆರೋಗ್ಯದ ಸಮಸ್ಯೆಗಳಿದ್ದರೆ ಚಿಕಿತ್ಸೆ ಕೊಡಿಸಲಾಗುತ್ತದೆ. ಜತೆಗೆ, ಭಾರತೀಯ ವೈದ್ಯ ಪದ್ಧತಿ ಅಳವಡಿಸಿಕೊಳ್ಳುವಂತೆಯೂ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಮೇಯರ್ ಸುನಂದಾ ಪಾಲನೇತ್ರ, ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಹದೇವ್ ಪ್ರಸಾದ್, ತಾಲೂಕು ವೈದ್ಯಾಧಿಕಾರಿ ಡಾ.ರಾಜೇಶ್ವರಿ, ಜೆಎಸ್‌ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಮಧು ಉಪಸ್ಥಿತರಿದ್ದರು.