

ಕೊಳ್ಳೇಗಾಲ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಾರಾಯಣ ಗುರು ವೃತ್ತದ ಬಳಿ ಶುಕ್ರವಾರ ರಾತ್ರಿ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ.
ತಾಲೂಕಿನ ಕುಂತೂರು ಗ್ರಾಮದ ಮನೋಜ್ ಕುಮಾರ್ (23) ಮೃತ. ಬೆಂಗಳೂರಿನ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮನೋಜ್ ಸ್ವಗ್ರಾಮದಲ್ಲಿನ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನಿಂದ ಕೊಳ್ಳೇಗಾಲ ಪಟ್ಟಣಕ್ಕೆ ಬಂದಿದ್ದ. ಊರಿಗೆ ಕರೆದೊಯ್ಯುವಂತೆ ತನ್ನ ತಮ್ಮ ರೋಹಿತ್‌ಕುಮಾರ್‌ನನ್ನು ಕರೆಯಿಸಿಕೊಂಡಿದ್ದ. ಗ್ರಾಮಕ್ಕೆ ತೆರಳುವಾಗ ಮಾರ್ಗಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಾರಾಯಣ ಗುರು ವೃತ್ತದ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ರೋಹಿತ್ ಕುಮಾರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಶನಿವಾರ ಸರ್ಕಾರಿ ಆಸ್ಪತ್ರೆಯಲ್ಲಿ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಮೃತ ದೇಹವನ್ನು ಒಪ್ಪಿಸಲಾಗಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.