

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಭಟ್ಟಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇಗುಲವನ್ನು ವಿವಿಧ ಪುಷ್ಪ, ತಳಿರು ತೋರಣದಿಂದ ಸಿಂಗರಿಸಲಾಗಿತ್ತಲ್ಲದೆ, ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು.
ದೇಗುಲದಲ್ಲಿ ಸಂಜೆ 6.30ರಿಂದ ರಾತ್ರಿ 8.30ರವರೆಗೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಬೇಡಗಂಪಣ ಸರದಿ ಅರ್ಚಕರು ಮಾದಪ್ಪನಿಗೆ ಮಹಾರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಇತರ ಅಭಿಷೇಕದ ಜತೆಗೆ ಸಹಸ್ರ ಬಿಲ್ವಾರ್ಚನೆ ನೆರವೇರಿಸಲಾಯಿತು. ಬಳಿಕ ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಿ ಮಾದಪ್ಪನ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಯಿತು. ಧೂಪ, ದೀಪದಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು. ಈ ಮೂಲಕ ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆಯು ಸಾಂಪ್ರದಾಯಿಕವಾಗಿ ನೆರವೇರಿತು. ಬಳಿಕ ಭಕ್ತರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಬಸವ ಉತ್ಸವ ಮೂರ್ತಿ ಮೆರವಣಿಗೆ: ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಿದ ಬಳಿಕ ವಿವಿಧ ಪುಷ್ಪಗಳಿಂದ ಸಿಂಗರಿಸಿದ್ದ ಬಸವ ಉತ್ಸವಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಸತ್ತಿಗೆ, ಸೂರಿಪಾನಿ, ಜಾಗಟೆ ಹಾಗೂ ಮಂಗಳವಾದ್ಯಗಳೊಂದಿಗೆ ಸಾಲೂರು ಶ್ರೀಗಳ ನೇತೃತ್ವದಲ್ಲಿ ಉತ್ಸವ ಮೂರ್ತಿಯನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಲಾಯಿತು.
ಈ ವೇಳೆ ಭಕ್ತರು ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಭಕ್ತಿಭಾವ ಮೆರೆದರು. ಬಳಿಕ ನೆರೆದಿದ್ದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಇತ್ತ ಶುಕ್ರವಾರ ಸಂಜೆ 7ರಲ್ಲಿ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಹೆಚ್ಚಿನ ಭಕ್ತರು ಭಾಗಿಯಾಗಿದ್ದರು. ಇದರಲ್ಲಿ ಹರಕೆ ಹೊತ್ತ ಭಕ್ತರು ದೇಗುಲದ ಸುತ್ತ ದಂಡಿನ ಕೋಲನ್ನು ಹೊತ್ತು ಪ್ರದಕ್ಷಿಣೆ ಹಾಕುವುದರ ಮೂಲಕ ಸ್ವಾಮಿ ಕೃಪೆಗೆ ಪಾತ್ರರಾದರು. ಈ ವೇಳೆ ಭಕ್ತರು ಜಯಘೋಷಗಳನ್ನು ಮೊಳಗಿಸಿದರು.
ಉತ್ಸವಗಳಲ್ಲಿ ಭಾಗಿಯಾದ ಭಕ್ತರು: ಇನ್ನು ಎಂದಿನಂತೆ ಮ.ಬೆಟ್ಟಕ್ಕೆ ಆಗಮಿಸಿದ್ದ ಹರಕೆ ಹೊತ್ತ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜೆ ಹೊಡೆಯುವ ಸೇವೆಯನ್ನು ಕೈಗೊಂಡು ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಕೆಲ ಭಕ್ತರು ದೇಗುಲದ ಸುತ್ತ ಹುಲಿ, ಬಸವ ಹಾಗೂ ರುದ್ರಾಕ್ಷಿ ವಾಹನ ಉತ್ಸವಾದಿ ಸೇವೆಗಳಲ್ಲಿ ಭಾಗಿಯಾಗಿದ್ದರು. ಈ ವೇಳೆ ಭಕ್ತರು ಜಯಘೋಷ ಮೊಳಗಿಸಿದರು. ಭಾನುವಾರ ರಜೆ ಹಾಗೂ ಭಟ್ಟಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮ.ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ದಾಸೋಹ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಸೇರಿದತೆ ಇನ್ನಿತರ ಅಗತ್ಯ ಮೂಲ ಸೌಕರ್ಯವನ್ನು ಒದಗಿಸಿದ್ದು, ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಅಗತ್ಯ ಮುತುವರ್ಜಿ ವಹಿಸಿದ್ದಾರೆ.