ಮಲೇರಿಯಾ ತಡೆ ಮಾಸಾಚರಣೆ

28Kush01
Published on

ಕುಶಾಲನಗರ: ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ತಡೆಗೆ ಮುಂಜಾಗ್ರತೆ ಅಗತ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಶ್ರೀನಿವಾಸ್ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಶಾಲನಗರ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ತಾಲೂಕಿನ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಶುಕ್ರವಾರ ಮಲೇರಿಯಾ ತಡೆ ಕುರಿತು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡೆಂೆ, ಮಲೇರಿಯಾ, ಚಿಕೂನ್ ಗುನ್ಯ ಇನ್ನಿತರ ಸಾಂಕ್ರಾಮಿಕ ರೋಗಗಳು ಮಳೆಗಾಲದಲ್ಲಿ ಹೆಚ್ಚಾಗಿ ಹರಡುತ್ತವೆ. ಇವು ಹರಡದಂತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಶೂನ್ಯ ಮಲೇರಿಯಾ ಗುರಿಯನ್ನು ತಲುಪೋಣ ಎಂಬ ಘೋಷವಾಕ್ಯದೊಂದಿಗೆ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಸಾಚರಣೆ ಹಮ್ಮಿಕೊಳ್ಳಲಾಗಿದೆ. ಮಲೇರಿಯಾ ನಿವಾರಣೆಗೆ ಮುನ್ನೆಚ್ಚರಿಕೆ ಹಾಗೂ ನಿಯಂತ್ರಣ ವಿಧಾನಗಳೇ ನಮ್ಮ ಅಸ್ತ್ರವಾಗಬೇಕು ಎಂದು ಡಾ. ಶ್ರೀನಿವಾಸ್ ಹೇಳಿದರು.
ಆರೋಗ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ ಇತ್ತೀಚೆಗೆ ಸಾಂಕ್ರಾಮಿಕ ರೋಗ ಪ್ರಕರಣಗಳಲ್ಲಿ ಇಳಿಮುಖವಾಗಿದೆ. ರೋಗದ ತೀವ್ರತೆಯ ಮೇಲೆ ಜನ ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಮಲೇರಿಯಾ, ಡೆಂೆ ಸೇರಿ ಯಾವುದೇ ಸಾಂಕ್ರಾಮಿಕ ರೋಗ ಕಂಡುಬಂದರೂ ರೋಗಿ ವಾಸವಿರುವ ಏರಿಯಾದಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net