ಮಲ್ಲಾಬಾದ್ ಏತ ನೀರಾವರಿ ಯೋಜನೆ ಅನುಷ್ಠಾನ ಶೀಘ್ರ

Dr Ajaysing
Published on

ಕಲಬುರಗಿ: ಜೇವರ್ಗಿ ತಾಲೂಕಿನ ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಅನುಷ್ಠಾನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಟೆಂಡರ್ ಕರೆಯುವಂತೆ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಶಾಸಕ ಡಾ.ಅಜಯಸಿಂಗ್ ಹೇಳಿದ್ದಾರೆ.
ಮಲ್ಲಾಬಾದ್ ಏತ ನೀರಾವರಿ ಯೋಜನೆ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಯೋಜನೆ ಅನುಷ್ಠಾನದ ಬಗ್ಗೆ ಕೃಷ್ಣಭಾಗ್ಯ ಜಲ ನಿಗಮದ ೧೪೦ನೇ ಆಡಳಿತ ಮಂಡಳಿ ಸಭೆಯಲ್ಲಿ ಅಂಗೀಕಾರವಾಗಿದೆ. ಯೋಜನೆಯ ಹಂತ ೧, ೨ ಮತ್ತು ೩ರ ಬಾಕಿ ಉಳಿದಿರುವ ವಿತರಣಾ ಕಾಮಗಾರಿ ಅನುಷ್ಠಾನಕ್ಕೆ ಅನುದಾನವೂ ನಿಗದಿಪಡಿಸಲು ಸಚಿವರು ಸೂಚಿಸಿದ್ದಾರೆ. ಈ ಯೋಜನೆ ಪೂರ್ಣಗೊಳಿಸಿ ೩೩,೮೬೦ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಡಿಸಿಎಂ ಅವರನ್ನು ಭೇಟಿಯಾಗಿ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಮನವರಿಕೆ ಮಾಡಿಕೊಡಲಾಗಿದೆ. ಸಚಿವರು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಲ್ಲಾಬಾದ್ ಏತ ನೀರಾವರಿ ಯೋಜನೆ ಮೂಲಕ ಯಡ್ರಾಮಿ ತಾಲೂಕಿನ ೩೮ ಮತ್ತು ಜೇವರ್ಗಿ ತಾಲೂಕಿನ ೨೦ ಹಳ್ಳಿಗಳ ರೈತರ ಜಮೀನುಗಳಿಗೆ ನೀರು ಸಿಗಲಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net