ಮಳೆ, ಸಿಡಿಲು, ಪ್ರವಾಹದಿಂದ ಪ್ರಾಣ ಹಾನಿಯಾಗದಂತೆ ಕ್ರಮ ವಹಿಸಿ: ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ

ಮಳೆ, ಸಿಡಿಲು, ಪ್ರವಾಹದಿಂದ ಪ್ರಾಣ ಹಾನಿಯಾಗದಂತೆ ಕ್ರಮ ವಹಿಸಿ: ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ
Published on

ಹಾಸನ: ಮಳೆ, ಸಿಡಿಲು, ಪ್ರವಾಹದಿಂದ ಪ್ರಾಣ ಹಾಗೂ ಹೆಚ್ಚಿನ ಆಸ್ತಿ ಹಾನಿಯಾಗದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಅವರು ಸೂಚನೆ ನೀಡಿದರು.

ರಾಜ್ಯದ ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಮುಂಗಾರುಪೂರ್ವ ಸಿದ್ಧತೆ ಕುರಿತು ಬುಧವಾರ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಮುಂಗಾರು ಮಳೆಯಿಂದ ಯಾವುದೇ ಪ್ರಾಣ ಹಾನಿ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ತಿಳಿಸಿದರು.

ಮಾಧ್ಯಮಗಳಲ್ಲಿ ಸಿಡಿಲು ಆ್ಯಪ್ ಬಗ್ಗೆ ವ್ಯಾಪಕ ಪ್ರಚಾರ ನೀಡಿ ಜನರಲ್ಲಿ ಕಾಲ ಕಾಲಕ್ಕೆ ಎಚ್ಚರಿಕೆ ಮಾಹಿತಿ ಪ್ರಚಾರ ಮಾಡಬೇಕು. ಸೈಕ್ಲೋನ್‌ನಿಂದ ತೊಂದರೆ ಎದುರಿಸಬಹುದಾದ ಜಿಲ್ಲೆಗಳಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಮಳೆಯಿಂದ ಉಂಟಾಗುವ ಜೀವ ಹಾನಿ ಹಾಗೂ ಮನೆ ಹಾನಿಗೆ ಸಕಾಲದಲ್ಲಿ ಪರಿಹಾರ ವಿತರಿಸಲು ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮಾಡಿ ವರದಿ ಮಾಡುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಹಾಗೂ ಎಲ್ಲ ತಾಲ್ಲೂಕುಗಳಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ಸಭೆ ನಡೆಸಲಾಗುತ್ತಿದೆ. ಜತೆಗೆ ಜಿಲ್ಲಾ ಹಂತದಲ್ಲಿ ಹಾಗೂ ಪ್ರತಿ ತಾಲ್ಲೂಕುಗಳಲ್ಲಿಯೂ ಪ್ರತ್ಯೇಕ ಕಂಟ್ರೋಲ್ ರೂಂ ತೆರೆದು, ಸರಿಯಾಗಿ ಕೆಲಸ ನಿರ್ವಹಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲನೆ ಸಹ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅತಿವೃಷ್ಟಿ ನಿರ್ವಹಣೆಗಾಗಿ ಅಗ್ನಿ ಶಾಮಕ ಹಾಗೂ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಲು ತಿಳಿಸಲಾಗಿದೆ. ಅಗ್ನಿಶಾಮಕ ಇಲಾಖೆಯವರಿಗೆ ಅಗತ್ಯವಿರುವ ಉಪಕರಣಗಳನ್ನು ನೀಡಲು ಈಗಾಗಲೇ ಕ್ರಮ ವಹಿಸಲಾಗಿದೆ. ಕಳೆದ ಬಾರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಒಂದು ಸ್ಥಳದಲ್ಲಿ ಭೂ ಕುಸಿತ ಉಂಟಾಗಿದ್ದು, ಆ ಪ್ರದೇಶದಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಮತ್ತು ಭೂ ಕುಸಿತದ ಬಗ್ಗೆ ಈಗಾಗಲೇ ಸ್ಥಳಗಳನ್ನು ಗುರುತಿಸಲಾಗಿದೆ. ಯಾವುದೇ ರೀತಿಯ ಅವಘಡ ಸಂಭವಿಸಿದರೆ ಮಾಹಿತಿ ನೀಡಲು ಸ್ಥಳೀಯವಾಗಿ ಪ್ರತಿನಿಧಿಗಳನ್ನು ನೇಮಿಸಲಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚಿನ ಮೊಬೈಲ್ ವಾಹನಗಳನ್ನು ನಿಯೋಜಿಸಲು ಸೂಚಿಸಲಾಗಿದೆ. ರಸ್ತೆ ಬದಿಯಲ್ಲಿ ಹಾನಿಯಾಗುವಂತಹ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ಅವರು ಮಾಹಿತಿ ನೀಡಿದರು.

ಎಲ್ಲಾ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಆರೋಗ್ಯ ಹಾಗೂ ಚೆಸ್ಕಾಂ ಇಲಾಖೆಗಳೊಂದಿಗೆ ಸಭೆ ನಡೆಸಿ ತುರ್ತಾಗಿ ಅವಶ್ಯಕತೆ ಇರುವ ಔಷಧ ಮತ್ತು ಅಗತ್ಯ ವಸ್ತುಗಳನ್ನು ದಾಸ್ತಾನು ಮಾಡಲು ತಿಳಿಸಲಾಗಿದೆ ಎಂದರು.

ವಿಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಆನಂದ್, ಉಪ ವಿಭಾಗ ಅಧಿಕಾರಿಗಳಾದ ಅನ್ಮೊಲ್ ಜೈನ್, ಮೊಹಮ್ಮದ್ ನಸೀಮ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್ ಹಾಗೂ ಎಲ್ಲಾ ತಾಲೂಕುಗಳ ತಹಸೀಲ್ದಾರ್‌ಗಳು ಭಾಗವಹಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net