

ಮೈಸೂರು: ಮಳೆಗಾಲದಲ್ಲಿ ಯಾವುದೇ ಅನಾಹುತ ಆಗದಂತೆ ಜಿಲ್ಲಾಡಳಿತದಿಂದ ಸಾಕಷ್ಟು ಮುನ್ನೆಚ್ಚರಿಕೆ ಕ್ರಮವಹಿಸಲಾಗಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ಸದಾ ಸನ್ನದ್ಧವಾಗಿರುವಂತೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.
ಮಳೆ ಹಾಗೂ ಸಿಡಿಲಿನಿಂದ ಮೂವರು ಮೃತಪಟ್ಟಿದ್ದು, ಜಾನುವಾರು, ಬೆಳೆ ನಷ್ಟವಾಗಿದೆ. ಈ ಸಂಬಂಧ ವರದಿ ತರಿಸಿಕೊಂಡು ಪರಿಹಾರ ನಿಧಿ ಹಾಗೂ ಮುಖ್ಯಮಂತ್ರಿಗಳ ನಿಧಿಯಿಂದ ಒಟ್ಟು 5 ಲಕ್ಷ ರೂ. ಪರಿಹಾರ ವಿತರಿಸಲು ಕ್ರಮ ವಹಿಸಲಾಗಿದೆ ಎಂದು ಮಾವು ಮೇಳ ಉದ್ಘಾಟನೆಯಲ್ಲಿ ಭಾಗವಹಿಸಿದ್ದ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಮಳೆ ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಹಾನಿಯಾಗದಂತೆ ತಡೆಯಲು ಮುನ್ನೆಚ್ಚರಿಕೆ ವಹಿಸಲಾಗಿದೆ. ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಕಳೆದ ವರ್ಷ ಮಳೆಯಿಂದ ತೊಂದರೆಗೊಳಗಾದವರಿಗೆ ಪರಿಹಾರ ನೀಡಲಾಗಿದ್ದು, ಪರಿಹಾರ ಸಿಗದವರಿಗೆ ವರದಿ ಆಧರಿಸಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಮಳೆ, ಗಾಳಿಯಿಂದ 10 ಜಾನುವಾರು ಮೃತಪಟ್ಟಿವೆ. 243 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ತೋಟಗಾರಿಕೆ ಬೆಳೆಗಳಲ್ಲಿ ಬಾಳೆ ಬೆಳೆದ ರೈತರಿಗೆ ನಷ್ಟ ಆಗಿದೆ. ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಪರಿಹಾರ ನೀಡಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ. ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿಯಾಗಿ ಸಂಗ್ರಹ ಮಾಡಿಕೊಂಡಿರುವುದರಿಂದ ಈ ಬಾರಿ ಯಾವುದೇ ಅಭಾವ ತಲೆತೋರುವುದಿಲ್ಲ ಎಂದು ಹೇಳಿದರು.