ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ನಿಗಾ ವಹಿಸಿ; ಶಾಸಕ ಸ್ವರೂಪ್ ಪ್ರಕಾಶ್ ಸೂಚನೆ

6
Published on

ಹಾಸನ: ಮುಂಗಾರು ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ನಿಗಾ ವಹಿಸಬೇಕು ಹಾಗೂ ತಾಲೂಕಿನಲ್ಲಿ ಮುಸುಕಿನ ಜೋಳ ಬೆಳೆಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ನೀಡಿ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು. ಇನ್ನು ಕೊರೋನಾ ಹರಡದಂತೆ ಮುನ್ನೆಚರಿಕಾ ಕ್ರಮ ಅನುಸರಿಸುವಂತೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ತಾಲೂಕು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಶಾಸಕ ಎಚ್.ಪಿ. ಸ್ವರೂಪ್ ಅಧ್ಯಕ್ಷತೆಯಲ್ಲಿ ನಡೆದ 2025-26ನೇ ಸಾಲಿನ ವಿಪತ್ತು ನಿರ್ವಹಣಾ ಸಭೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಅಂತರ್ ಇಲಾಖಾ ಅಧಿಕಾರಿಗಳಿಗೆ ವಿವಿಧ ಇಲಾಖಾವಾರು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಇಲಾಖೆ ವತಿಯಿಂದ ಮಾಹಿತಿಗಳನ್ನು ಪಡೆದು ಉನ್ನತ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಮಳೆಯಿಂದ ಈಗಾಗಲೇ ಹಾನಿಯಾಗಿರುವ ಶಾಲಾ-ಕಾಲೇಜು ಕಟ್ಟಡಗಳು ಹಾಗೂ ಬೆಳೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಈಗಾಗಲೇ ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ಇನ್ನಿತರ ಸಲಕರಣೆಗಳನ್ನು ಸಂಬಂಧಿಸಿದ ಇಲಾಖೆಗಳು ಒದಗಿಸಬೇಕು. ತಾಲೂಕಿನಲ್ಲಿ ಮುಸುಕಿನ ಜೋಳ ಹಾನಿಯಾಗಿರುವ ಬಗ್ಗೆ ಮಾಹಿತಿ ನೀಡಿ ಸೂಕ್ತ ಪರಿಹಾರ ಕಲ್ಪಿಸಬೇಕು ಮತ್ತು ಜೋಳ ಬೆಳೆಗೆ ತಗುಲುತ್ತಿರುವ ರೋಗದ ಬಗ್ಗೆ ರೈತರಿಗೆ ಅರಿವು ಮೂಡಿಸುವಜ ತೆಗೆ ಸೂಕ್ತ ಔಷಧ ಸಿಂಪಡಣೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನದಲ್ಲಿ ಸೋಂಕು ಹರಡುದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಸೋಂಕು ದೃಢಪಡಿಸಲು ಪರೀಕ್ಷೆಯನ್ನು ಹೆಚ್ಚಿಸಬೇಕು. ಮಳೆಗಾಲ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಆಸ್ಪತ್ರೆಗಳಲ್ಲಿ ಹೆಚ್ಚಿನ ಬೇಡ್‌ಗಳನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳೇಬೇಕು. ಬರುವ ರೋಗಿಗಳಿಗೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net