ಮಹದೇಶ್ವರಬೆಟ್ಟದಲ್ಲಿ ಭಕ್ತರ ದಂಡು

01 HANUR 3.
Published on

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಭಾನುವಾರ ಭಟ್ಟಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಮಾದಪ್ಪನಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಭಕ್ತರು ತುಂತುರು ಮಳೆಯ ನಡುವೆಯೇ ವಿವಿಧ ಉತ್ಸವಾದಿ ಸೇವೆಗಳಲ್ಲಿ ಭಾಗಿಯಾಗಿ ಭಕ್ತಿಭಾವ ಮೆರೆದರು.

ಅಮಾವಾಸ್ಯೆಯ ಹಿನ್ನೆಲೆಯಲ್ಲಿ ದೇಗುಲವನ್ನು ತಳಿರು, ತೋರಣ ಹಾಗೂ ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತಲ್ಲದೆ, ವಿವಿಧ ವಿದ್ಯುತ್ ದೀಪದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ಬೇಡಗಂಪಣ ಸರದಿ ಅರ್ಚಕರಿಂದ ಸ್ವಾಮಿಗೆ ಬೆಳಗ್ಗೆ ಅಮಾವಾಸ್ಯೆ ವಿಶೇಷ ಪೂಜೆ ನೆರವೇರಿತು. ವಾರಾಂತ್ಯದ ರಜೆ ಹಾಗೂ ಭಟ್ಟಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಉಳಿದ ಅಮಾವಾಸ್ಯೆಗಿಂತಲೂ ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಿಗೆ ಭೇಟಿ ನೀಡಿದ್ದರು. ತುಂತುರು ಮಳೆಯ ನಡುವೆಯೇ ವಿವಿಧ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗುವುದರ ಜತೆಗೆ ಹರಕೆ ಹೊತ್ತವರು ಇಷ್ಟಾರ್ಥ ಸಲ್ಲಿಸಿ, ಉತ್ಸವಾದಿ ಸೇವೆಗಳನ್ನು ನೆರವೇರಿಸಿದರು.

ಮಾದಪ್ಪನಿಗೆ ಅಮಾವಾಸ್ಯೆ ವಿಶೇಷ ಪೂಜೆ: ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಬೆಳಗಿನ ಜಾವ 3.30 ಗಂಟೆಯಿಂದ 6.30ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಛತ್ರಿ, ಚಾಮರ, ವಾದ್ಯಮೇಳದೊಂದಿಗೆ ದೇಗುಲ ಸಮೀಪದ ನಂದನವನದ ಮಜ್ಜನ ಬಾವಿಗೆ ತೆರಳಿ ಅಗ್ರೋದಕ ಹಾಗೂ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕರೆದ ಹಾಲಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಮೆರವಣಿಗೆಯ ಮೂಲಕ ದೇಗುಲಕ್ಕೆ ತಂದರು. ಬಳಿಕ ಸ್ವಾಮಿಗೆ ಸಂಕಲ್ಪಾದಿ, ಏಕವಾರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಶತನಾಮ ಬಿಲ್ವಾರ್ಚನೆ, ಎಳನೀರು, ಜೇನುತುಪ್ಪ, ಮೊಸರು, ಸಕ್ಕರೆ, ಖರ್ಜೂರ, ದ್ರಾಕ್ಷಿ ಹಾಗೂ ಹಾಲಿನ ಅಭಿಷೇಕ ನೆರವೇರಿಸಿದರು.

ಬಳಿಕ 2ನೇ ಅಭಿಷೇಕದ ವಿಶೇಷ ಪೂಜೆಯಲ್ಲಿ ಮಾದಪ್ಪನಿಗೆ ಅಭಿಷೇಕ ಅರ್ಚನೆ, ಏಕವಾರು ರುದ್ರಾಭಿಷೇಕ, ಸಂಕಲ್ಪ ಬಿಲ್ವಾರ್ಚನೆ ನೆರವೇರಿಸಿ ನವರತ್ನ ಕೀರಿಟಧಾರಣೆಯೊಂದಿಗೆ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ಧೂಪ, ದೀಪದಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಿದರು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ಈ ಮೂಲಕ ಮಾದಪ್ಪನಿಗೆ ಅಮಾವಾಸ್ಯೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ತುಂತುರು ಮಳೆಯ ನಡುವೆಯೇ ಸೇವೆಗಳಲ್ಲಿ ಭಾಗಿಯಾದ ಭಕ್ತರು:

ವಾರಾಂತ್ಯದ ರಜೆ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಾನುವಾರ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಮ.ಬೆಟ್ಟಕ್ಕೆ ಆಗಮಿಸಿದ್ದರು. ಆದರೆ ಫೆಂಗಲ್ ಚಂಡ ಮಾರುತದ ಪರಿಣಾಮ ಶ್ರೀ ಕ್ಷೇತ್ರದಲ್ಲಿ ಇಡೀ ದಿನ ತುಂತುರು ಮಳೆ ಸುರಿಯುತ್ತಲೇ ಇತ್ತು. ಆದರೂ ಅದನ್ನು ಲೆಕ್ಕಿಸದ ಭಕ್ತರು ಮಳೆಯ ನಡುವೆಯೇ ಬೆಳ್ಳಿ ತೇರಿನ ಉತ್ಸವ, ಹುಲಿವಾಹನ, ರುದ್ರಾಕ್ಷಿ ವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಉತ್ಸವದ ಸೇವೆಯಲ್ಲಿ ಭಾಗಿಯಾಗಿದ್ದರು. ಜತೆಗೆ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಉತ್ಸವ ಮೂರ್ತಿಗಳಿಗೆ ಧನ, ಧಾನ್ಯ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಸೆದು ಭಕ್ತಿ ಮೆರೆದರು.

ಹರಕೆಹೊತ್ತ ಭಕ್ತರು ಅಂತರಗಂಗೆಯ ಕಲ್ಯಾಣಿಯಲ್ಲಿ ಪುಣ್ಯಸ್ನಾನ ಮಾಡಿದರು. ತುಂತುರು ಮಳೆಯಲ್ಲಿಯೇ ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆಯನ್ನು ನೆರವೇರಿಸಿದರು. ಹಾಗಾಗಿ ಆಗಮಿಸಿದ್ದ ಭಕ್ತರು ಮಳೆಯ ನಡುವೆಯೇ ಸೇವಾ ಕಾರ್ಯಗಳಲ್ಲಿ ಭಾಗಿಯಾದರು.

ಲಕ್ಷಾಂತರ ಭಕ್ತರು ಭೇಟಿ:

ಭಾನುವಾರದ ರಜೆಯ ಹಿನ್ನೆಲೆಯಲ್ಲಿ ಮ.ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಬಹುತೇಕ ಭಕ್ತರು ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರೆ, ಕೆಲವರು 500 ರೂ.ಟಿಕೆಟ್ ಪಡೆದು ರಾಜಗೋಪುರದ ವಿಶೇಷ ಕೌಂಟರ್ ಮೂಲಕ ತೆರಳಿ ದರ್ಶನ ಪಡೆದರು. ಪ್ರಾಧಿಕಾರ ಅಂಗವಿಕಲರು ಹಾಗೂ ವೃದ್ಧರಿಗೆ ನೇರವಾಗಿ ತೆರಳಿ ದೇವರ ದರ್ಶನ ಪಡೆಯಲು ಪ್ರತ್ಯೇಕ ಕೌಂಟರ್ ತೆರೆದು ಅನುಕೂಲ ಕಲ್ಪಿಸಿತ್ತು. ಚಾಮರಾಜನಗರ ಸೇರಿದಂತೆ ಮೈಸೂರು, ಮಂಡ್ಯ, ಬೆಂಗಳೂರು, ಬಿಡದಿ, ರಾಮನಗರ, ಕನಕಪುರ, ಚನ್ನಪಟ್ಟಣ, ಮದ್ದೂರು, ಮಳವಳ್ಳಿ, ಎಚ್.ಡಿ ಕೋಟೆ, ಪಿರಿಯಾಪಟ್ಟಣ ಹಾಗೂ ಇನ್ನಿತರ ಕಡೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಶಕ್ತಿ ಯೋಜನೆಯ ಪರಿಣಾಮ ಆಗಮಿಸಿದ್ದ ಮಹಿಳೆಯರ ಸಂಖ್ಯೆ ಹೆಚ್ಚಿತ್ತು. ಎಲ್ಲ ಅಮಾವಾಸ್ಯೆಗಳಿಗಿಂತ ಈ ಅಮಾವಾಸ್ಯೆಯಲ್ಲಿ ಭಕ್ತರ ಸಂಖ್ಯೆ ದ್ವಿಗುಣಗೊಂಡಿತ್ತು. ಇದರಿಂದ ಮ.ಬೆಟ್ಟ ಭಾನುವಾರ ಭಕ್ತ ಗಣದಿಂದ ತುಂಬಿ ತುಳುಕುತ್ತಿತ್ತು.

ಪ್ರಾಧಿಕಾರದಿಂದ ಅಗತ್ಯ ಸೌಕರ್ಯ: ಆಗಮಿಸುವ ಭಕ್ತರಿಗೆ ಶ್ರೀಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದಾಸೋಹ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸಲಾಗಿತ್ತು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ತುಂತುರು ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಕಾರ್ಯದರ್ಶಿ ಎ.ಇ ರಘು ಅವರು ದೇಗುಲ, ದಾಸೋಹ ಭವನ, ಭಕ್ತರು ತೆರಳುವ ಸರತಿ ಸಾಲು, ದೇಗುಲದ ಆವರಣ ಸೇರಿದಂತೆ ಇನ್ನಿತರ ಕಡೆಗಳಿಗೆ ಆಗಾಗ್ಗೆ ಭೇಟಿ ನೀಡಿ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಸಿಬ್ಬಂದಿಗೆ ಅಗತ್ಯ ಸೂಚನೆ ನೀಡುವುದರ ಮೂಲಕ ಮೊಕ್ಕಾಂ ಹೂಡಿ ಮುನ್ನೆಚ್ಚರಿಕೆ ವಹಿಸಿದ್ದರು. ಇನ್ನು ಮುಂಜಾಗ್ರತಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net