

ಬೀದರ್: ಮಹಿಳಾ ಸಿಬ್ಬಂದಿ ಅವಹೇಳನ ಮಾಡಿರುವ ತಾಲ್ಲೂಕಿನ ಜನವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಲಕ್ಷ್ಮಣ ಜಾಧವ್ ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿ ಮಲ್ಲಿಕಾರ್ಜುನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘ ಆಗ್ರಹಿಸಿದೆ.
ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಅಧ್ಯಕ್ಷ ರಾಜಕುಮಾರ ಮಾಳಗೆ ಅವರ ನೇತೃತ್ವದಲ್ಲಿ ನಗರದಲ್ಲಿ ನಿಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಆಡಳಿತ ವೈದ್ಯಾಧಿಕಾರಿ ಹಾಗೂ ಆರೋಗ್ಯ ನಿರೀಕ್ಷಣಾ ಅಧಿಕಾರಿ ಮಹಿಳಾ ಸಿಬ್ಬಂದಿ ಕುರಿತು ಅಶ್ಲೀಲ ಪದ ಬಳಸಿರುವ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಿಂದ ಮಹಿಳಾ ಸಿಬ್ಬಂದಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದು ತಿಳಿಸಿದರು.
ಕೂಡಲೇ ತಪ್ಪಿತಸ್ಥರನ್ನು ಅಮಾನತುಗೊಳಿಸಿ, ನೊಂದ ಮಹಿಳಾ ಸಿಬ್ಬಂದಿಗೆ ನ್ಯಾಯ ದೊರಕಿಸಿಕೊಡಬೇಕು. ಅಧಿಕಾರಿಗಳು ತಮ್ಮ ಅಧೀನ ಸಿಬ್ಬಂದಿ ಜತೆ ಗೌರವಯುತವಾಗಿ ನಡೆದುಕೊಳ್ಳಲು ಸೂಚಿಸಬೇಕು ಎಂದು ಒತ್ತಾಯಿಸಿದರು.
ಮೂರು ದಿನಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಆರೋಗ್ಯ ನಿರೀಕ್ಷಣಾ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುನೀಲಕುಮಾರ ಕಸ್ತೂರೆ, ಪ್ರಯೋಗ ಶಾಲಾ ತಂತ್ರಜ್ಞರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯೇಸುದಾಸ ಥೋರೆ, ನೇತ್ರಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಕಾಡಾದೆ, ಪ್ರಮುಖರಾದ ಖಾದರ್ ಖಾನ್, ರವಿ ಪಂಚಾಳ, ಉಮೇಶ ಬಿರಾದಾರ, ರಾಜಕುಮಾರ ಹಜನಾಳೆ, ಟಿ.ಎಂ. ಮಚ್ಚೆ, ಪ್ರಕಾಶ ಮಹಿಮಾಕರ್, ರವಿ ವಗ್ಗೆ, ಪ್ರದೀಪ್ ಗೌಡ ಮತ್ತಿತರರು ಇದ್ದರು.