

ಬೆಟ್ಟದಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನ ವಿಕಾಸ ಯೋಜನೆ ಜಾರಿಗೆ ತಂದಿದೆ. ಇದರಿಂದ ಲಕ್ಷಾಂತರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತು ಕೊಡಗು ಜಿಲ್ಲಾಧ್ಯಕ್ಷೆ ವನಿತಾ ಚಂದ್ರಮೋಹನ್ ಹೇಳಿದರು.
ಬೆಟ್ಟದಪುರ ಸಮೀಪದ ಕಿತ್ತೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಹಿಳೆಯರಿಗೆ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ, ಕಾನೂನು ಅರಿವು, ಕೌಟುಂಬಿಕ ಸಾಮರಸ್ಯ ಕುರಿತು ಅರಿವು ಮೂಡಿಸಲಾಗುತ್ತಿದೆ. ಇದರೊಂದಿಗೆ ಅಧ್ಯಯನ ಪ್ರವಾಸಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಕವಯತ್ರಿ ಕೆ.ಪಿ.ಭಾರತಿ ಮಾತನಾಡಿ, ಆರೋಗ್ಯವಂತ ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯ. ಕುಟುಂಬಕ್ಕಾಗಿ ದುಡಿಯುವ ಮಹಿಳೆಯರು ತಮ್ಮ ಆರೋಗ್ಯದ ಕುರಿತು ಕಾಳಜಿವಹಿಸುತ್ತಿಲ್ಲ. ಬಹಳಷ್ಟು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದು ಇದು ಅವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಪೌಷ್ಟಿಕ ಆಹಾರ ಸೇವನೆಯಿಂದ ರಕ್ತಹೀನತೆ ತಡೆಯಬಹುದು ಎಂದು ಸಲಹೆ ನೀಡಿದರು.
ಯೋಜನೆ ಜಿಲ್ಲಾ ನಿರ್ದೇಶಕಿ ಲೀಲಾವತಿ, ಕಿತ್ತೂರು ಕಾರ್ಯಕ್ಷೇತ್ರ ಒಕ್ಕೂಟದ ಅಧ್ಯಕ್ಷೆ ವಸಂತಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ರಮೇಶ್, ತಾಲೂಕು ಯೋಜನಾಧಿಕಾರಿ ಸಂತೋಷ್ ಕುಮಾರ್ ಇತರರು ಇದ್ದರು.