ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವ ಏಕೈಕ ರಾಜ್ಯ ಕರ್ನಾಟಕ

14SPT4
Published on

ಸೋಮವಾರಪೇಟೆ: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಕಲ್ಪಿಸಿರುವ ರಾಷ್ಟ್ರದ ಏಕೈಕ ಕರ್ನಾಟಕ ರಾಜ್ಯ ಎಂಬ ಹೆಮ್ಮೆ ನಮ್ಮದಾಗಿದ್ದು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಜನಪ್ರಿಯವಾಗಿವೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಕ್ತಿ ಯೋಜನೆಯಡಿ 500 ಕೋಟಿಗೂ ಅಧಿಕ ಮಹಿಳೆಯರು, ವಿದ್ಯಾರ್ಥಿನಿಯರು ಪ್ರಯಾಣ ಮಾಡಿದ್ದ ಹಿನ್ನೆಲೆಯಲ್ಲಿ ಸೋಮವಾರ ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಏರ್ಪಡಿಸಿದ್ದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿದೆ. ಸಾರಿಗೆ ನಿಗಮಕ್ಕೂ ಹೆಚ್ಚಿನ ಲಾಭ ಉಂಟಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ಸಮಾಜದ ಎಲ್ಲ ವರ್ಗದವರ ಮನೆ ಮನೆಗೆ ರಾಜ್ಯ ಸರ್ಕಾರದ ಯೋಜನೆಗಳು ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇಡೀ ದೇಶದಲ್ಲಿಯೇ ಉತ್ತಮ ಆಡಳಿತವನ್ನು ನೀಡಿರುವ ಏಕೈಕ ರಾಜ್ಯವಾಗಿದೆ ಎಂದರು.

ರೈತರು, ಬಡವರು, ಶೋಷಿತರ, ದುರ್ಬಲರ ಏಳಿಗೆ ಮಾತ್ರವಲ್ಲದೇ ಇಡೀ ರಾಜ್ಯದ ಜನರಿಗೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಮನೆ ಮನೆಯ ಸಂಕಷ್ಟವನ್ನು ದೂರ ಮಾಡುವ ಪ್ರಯತ್ನ ಯಶಸ್ವಿಯಾಗಿದೆ. ಕಾಂಗ್ರೆಸ್‌ನಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದು ಎಲ್ಲರ ಮನದಲ್ಲಿದೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಿ.ಎಂ.ಕಾಂತರಾಜು ಹೇಳಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ಪ್ರಮುಖರಾದ ಕೆ.ಎ.ಯಾಕೂಬ್, ಚೇತನ್, ಶೀಲಾ ಡಿಸೋಜ, ರುಬಿನಾ ಮತ್ತಿತರರು ಇದ್ದರು.

ಬಸ್ ನಿಲ್ದಾಣದಲ್ಲಿರುವ ಬಸ್‌ಗಳಿಗೆ ಪೂಜೆ ಸಲ್ಲಿಸಿ ಪ್ರಯಾಣಿಕರಿಗೆ ಸಿಹಿ ಹಂಚಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net