

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.1 ರಂದು ಜಿಲ್ಲೆಯ ವಿವಿಧ ಇಲಾಖೆಗಳ ಅಧಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ತಿಳಿಸಿದರು.
ನಗರದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ 11 ಗಂಟೆಗೆ ಆರಂಭವಾಗಲಿದೆ.ಪ್ರವಾಸೋದ್ಯಮ, ಕೃಷಿ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ತೋಟಗಾರಿಕೆ, ಶಾಲಾ ಶಿಕ್ಷಣ, ನಗರಸಭೆ ಹೀಗೆ ಸುಮಾರು 15 ಇಲಾಖೆ ವ್ಯಾಪ್ತಿಯಲ್ಲಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಿರುವ 101.63 ಕೋಟಿ ಕಾಮಗಾರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಆಯುಷ್ , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸೇರಿ 9 ಇಲಾಖೆ ಅಡಿಯ 1243.33 ಕೋಟಿ ವೆಚ್ಚದಲ್ಲಿ ಶಂಕುಸ್ಥಾಪನೆ ಕಾಮಗಾರಿಗಳಿಗೆ ಅಡಿಗಲ್ಲು ಹಾಕಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉದ್ಘಾಟನೆ, ಶಂಕುಸ್ಥಾಪನೆ ಕಾಮಗಾರಿಗಳ ಒಟ್ಟು ಮೊತ್ತ 1344,98,37 ಕೋಟಿ ರೂ. ಎಂದು ಹೇಳಿದರು.
ಮೊದಲು ವಿವಿಧ ಯೋಜನೆ ಉದ್ಘಾಟನೆ, ಶಂಕುಸ್ಥಾಪನೆ ನಂತರ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಸುವರು. ಇದೇ ವೇಳೆ ವಿವಿಧ ಸವಲತ್ತು ವಿತರಣೆ ಮಾಡುವರು ಸಿಎಂ ಅವರೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಇತರೆ ಸಚಿವರು ಭಾಗಿಯಾಗಲಿದ್ದಾರೆ ಎಂದರು
ಫಲಾನುಭವಿಗಳ ಸಮಾವೇಶ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು 40 ರಿಂದ 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ. ಅವರನ್ನು ಕರೆದುಕೊಂಡು ಬರಲು ಈಗಾಗಲೇ 700 ಬಸ್‌ಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗುವ ಎಲ್ಲರಿಗೂ ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಇದ್ದರು.