

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾ.1ರಂದು ನಗರದಲ್ಲಿ ಜಿಲ್ಲೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸುತ್ತಿದ್ದು, ಅವರನ್ನ ಜಿಲ್ಲಾ ಕಾಂಗ್ರೆಸ್ ಅತ್ಯಂತ ಪ್ರೀತಿಯಿಂದ ಸ್ವಾಗತಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಈ.ಎಚ್. ಲಕ್ಷ್ಮಣ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಕಾಂಗ್ರೆಸ್ ಪಕ್ಷ ಜಿಲ್ಲೆಗೆ ಸಾಕಷ್ಟು ಕೊಡುಗೆಗಳನ್ನು ನೀಡಿದೆ ಆದರೂ ಕೂಡ ವಿರೋಧ ಪಕ್ಷದವರು ಟಿಕೆ-ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಹಲವು ಕೊಡುಗೆ ನೀಡಿದೆ. ಇನ್ನೂ ಆಗಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ ಮನವಿ ಮಾಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈಗಾಗಲೇ ಪಕ್ಷ ಸಂಘಟಿತವಾಗಿದ್ದು, ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಲಾಗುವುದು. ಅಭ್ಯರ್ಥಿ ಯಾರು ಆದರೂ ಕೂಡ ಈ ಬಾರಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಒಂದೇ ಮಾನದಂಡವಾಗಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದರು.
ಈಗಾಗಲೇ ಹಲವರು ಆಕಾಂಕ್ಷೆಗಳಿದ್ದು ಪಕ್ಷ ಯಾರಿಗೆ ನಿರ್ಣಯ ಮಾಡಿ ಅಭ್ಯರ್ಥಿ ಎಂದು ಘೋಷಣೆ ಮಾಡಿದರೆ ಎಲ್ಲರೂ ಕೂಡ ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಬಿ.ಕೆ. ಮಂಜುನಾಥ್, ದಾಸರಕೊಪ್ಪಲು ರಘು, ಜಯಲಕ್ಷ್ಮಮ್ಮ, ಪ್ರಸನ್ನ ಕುಮಾರ್, ಮಂಜುನಾಥ ಶರ್ಮ ಇದ್ದರು.