ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆ

30 HANUR 1
Published on

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಮಾದಪ್ಪನಿಗೆ ಎಣ್ಣೆಮಜ್ಜನ ಸೇವೆ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸಾವಿರಾರು ಭಕ್ತರು ದೇವರ ದರ್ಶನ ಪಡೆದರು.

ದೇಗುಲದಲ್ಲಿ ಬುಧವಾರ ಸಂಜೆ 6.30 ರಿಂದ ರಾತ್ರಿ 8.30ರವರೆಗೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಬೇಡಗಂಪಣ ಸರದಿ ಅರ್ಚಕರು ಮಾದಪ್ಪನಿಗೆ ವಿವಿಧ ಅಭಿಷೇಕದ ಸೇವೆಯ ಜತೆಗೆ ತ್ರಿಕಾಲ ಪೂಜೆ ಸಲ್ಲಿಸಿ, ಎಣ್ಣೆಮಜ್ಜನ ಸೇವೆ ನೆರವೇರಿಸಿದರು. ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ಧೂಪ, ದೀಪದಾರತಿ, ಮಹಾಮಂಗಳಾರತಿ ಬೆಳಗಿಸಲಾಯಿತು.

ಚಿನ್ನದ ತೇರಿನ ಉತ್ಸವ: ಬುಧವಾರ ಬೆಳಗ್ಗೆ 8 ಗಂಟೆಗೆ ಜರುಗಿದ ಬೆಳ್ಳಿ ತೇರಿನ ಉತ್ಸವದಲ್ಲಿ ಹಾಗೂ ಸಂಜೆ 7 ಗಂಟೆಗೆ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಹರಕೆ ಹೊತ್ತ ಭಕ್ತರು ದೇಗುಲದ ಸುತ್ತ ದಂಡಿನ ಕೋಲನ್ನು ಹೊತ್ತು ಪ್ರದಕ್ಷಿಣೆ ಹಾಕಿ ಸ್ವಾಮಿ ಕೃಪೆಗೆ ಪಾತ್ರರಾದರು. ಈ ವೇಳೆ ಭಕ್ತರು ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ ಘೋಷಣೆಗಳನ್ನು ಕೂಗಿ ಭಕ್ತಿ ಭಾವವನ್ನು ಮೆರೆದರು. ಮ.ಬೆಟ್ಟಕ್ಕೆ ಆಗಮಿಸಿದ ಹರಕೆಹೊತ್ತ ಭಕ್ತರು ಅಂತರಗಂಗೆಯಲ್ಲಿ ಪುಣ್ಯಸ್ನಾನ ಮಾಡಿ ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆಯನ್ನು ನೆರವೇರಿಸಿದರು. ಕೆಲವು ಭಕ್ತರು ದೇಗುಲದ ಸುತ್ತ ಜರುಗಿದ ಹುಲಿ, ಬಸವ ಹಾಗೂ ರುದ್ರಾಕ್ಷಿ ವಾಹನ ಉತ್ಸವಾದಿಗಳಲ್ಲಿ ಭಾಗಿಯಾಗಿದ್ದರು.

ಬೀಡುಬಿಟ್ಟಿರುವ ಭಕ್ತರು

ಮ.ಬೆಟ್ಟದಲ್ಲಿ 5 ದಿನಗಳ ಕಾಲ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಮಾದಪ್ಪನಿಗೆ ವಿಶೇಷ ಪೂಜೆ ಹಾಗೂ ಉತ್ಸವಾದಿ ಸೇವೆಗಳನ್ನು ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಮ.ಬೆಟ್ಟಕ್ಕೆ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಭಕ್ತರು ಕಾಲ್ನಡಿಗೆ ಮೂಲಕ ಆಗಮಿಸಿ 3-4 ದಿನಗಳ ಕಾಲ ವಾಸ್ತವ್ಯ ಹೂಡುತ್ತಾರೆ. ಕಳೆದ ಒಂದು ವಾರದಿಂದಲೂ ಚಾಮರಾಜನಗರ ಸೇರಿದಂತೆ ಮೈಸೂರು, ಮಂಡ್ಯ, ನಂಜನಗೂಡು, ಮದ್ದೂರು, ಎಚ್. ಡಿ ಕೋಟೆ, ಮಳವಳ್ಳಿ, ನರಸೀಪುರ ಇನ್ನಿತರ ಕಡೆಗಳಿಂದ ಮ.ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಇದರಿಂದ ಶ್ರೀ ಕ್ಷೇತ್ರದಲ್ಲಿ ಎತ್ತ ನೋಡಿದರೂ ಭಕ್ತರೇ ತುಂಬಿ ತುಳುಕುತ್ತಿದ್ದು, ಜಾತ್ರೆಯ ಸಂಭ್ರಮ ಕಳೆಗಟ್ಟಿದೆ.

ಝಗಮಗಿಸುತ್ತಿದೆ ಮ.ಬೆಟ್ಟ

ಜಾತ್ರೆಯ ಅಂಗವಾಗಿ ಶ್ರೀಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇಗುಲವನ್ನು ವಿವಿಧ ಪುಷ್ಪ, ತಳಿರು-ತೋರಣಗಳಿಂದ ಸಿಂಗರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಗೋಪುರ, ದೇಗುಲ, ಆವರಣ, ಪ್ರಮುಖ ರಸ್ತೆಗಳನ್ನು ಬಗೆಬಗೆಯ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ಮಾಡಲಾಗಿದೆ. ದೀಪದಗಿರಿ ಒಡ್ಡುವಿನ ಶ್ರೀ ಮಹದೇಶ್ವರರ 108 ಅಡಿ ಎತ್ತರದ ಪ್ರತಿಮೆಗೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ಕಣ್ಮನ ಸೆಳೆಯುತ್ತಿದೆ.

ಪ್ರಾಧಿಕಾರದಿಂದ ಅಗತ್ಯ ಸೌಕರ್ಯ

ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಹಿನ್ನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ನಿರಂತರ ಸ್ವಚ್ಛತೆ ಜತೆಗೆ ಭಕ್ತರಿಗೆ ಕುಡಿಯುವ ನೀರು, ಶೌಚಗೃಹ, ಶವರ್ ವ್ಯವಸ್ಥೆ, ನಿರಂತರ ದಾಸೋಹ, ನೆರಳಿನ ವ್ಯವಸ್ಥೆ ಇನ್ನಿತರ ಅಗತ್ಯ ಮೂಲಸೌಕರ್ಯವನ್ನು ಒದಗಿಸಿದೆ. ಹಿರಿಯ ನಾಗರಿಕರು, ವಿಕಲಚೇತನರಿಗೆ ವಿಶೇಷ ಕೌಂಟರ್ ತೆರೆದು ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಭಕ್ತರ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಬಸ್ ಸೌಕರ್ಯ ಕಲ್ಪಿಸಲಾಗಿದೆ. ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಅವರು ಆಗಾಗ್ಗೆ ದೇವರ ದರ್ಶನದ ಸರತಿ, ಸಾಲು, ನಿರಂತರ ದಾಸೋಹ, ಅಂತಂರಗಂಗೆ, ಇತರ ಸ್ಥಳಗಳಿಗೆ ತೆರಳಿ ಪರಿಶೀಲಿಸುತ್ತಿದ್ದಾರೆ. ಸಿಬ್ಬಂದಿಗೆ ಅಗತ್ಯ ಸಲಹೆ, ಸೂಚನೆ ನೀಡುತ್ತಿದ್ದು, ಜಾತ್ರೆ ಯಶಸ್ಸಿಗೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಭಕ್ತರ ಸಂಖ್ಯೆಯಲ್ಲಿ ಹೆಚ್ಚಳ

ಮ.ಬೆಟ್ಟದಲ್ಲಿ ನಡೆಯುವ ದೀಪಾವಳಿ ಜಾತ್ರೆಗೆ ಸುಮಾರು 5 ಲಕ್ಷ ಭಕ್ತರು ಭಾಗಿಯಾಗುವ ಸಾಧ್ಯತೆ ಇದೆ. ಈಗಾಗಲೇ ಒಂದೂವರೆ ಲಕ್ಷ ಭಕ್ತರು ಆಗಮಿಸಿದ್ದಾರೆ. ಗುರುವಾರ ನರಕ ಚತುರ್ಥಿ, ಶುಕ್ರವಾರ ಅಮಾವಾಸ್ಯೆ ಇರುವುದರಿಂದ ಹಾಗೂ 101 ಹೆಣ್ಣು ಮಕ್ಕಳಿಂದ ಮಾದಪ್ಪನಿಗೆ ನೆರವೇರುವ ಹಾಲರುವೆ ಉತ್ಸವದಲ್ಲಿ ಪ್ರತಿವರ್ಷದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಲಿದ್ದಾರೆ. ಶನಿವಾರ ಜರುಗುವ ಮಹಾ ರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಲಿದ್ದಾರೆ. ಹಾಗಾಗಿ ಇನ್ನು ಮೂರು ದಿನಗಳ ಕಾಲ ಶ್ರೀಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net