

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಎಳ್ಳಮಾವಾಸ್ಯೆ ಹಿನ್ನೆಲೆಯಲ್ಲಿ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ಹಾಗೂ ವಿಶೇಷ ಪೂಜೆಗಳು ಜರುಗಿದ್ದು, ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ದೇಗುಲವನ್ನು ವಿವಿಧ ಪುಷ್ಪ, ತಳಿರು-ತೋರಣಗಳಿಂದ ಸಿಂಗಾರ ಮಾಡಲಾಗಿತ್ತಲ್ಲದೆ ಗೋಪುರ ಹಾಗೂ ದೇಗುಲದ ಆವರಣವನ್ನು ವಿದ್ಯುತ್‌ದೀಪದಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ಗುರುವಾರ ಸಂಜೆ 6.30 ರಿಂದ 8.30ರವರೆಗೆ ಸ್ವಾಮಿಗೆ ಬೇಡಗಂಪಣ ಸರದಿ ಅರ್ಚಕರಿಂದ ವಿಶೇಷ ಪೂಜೆ ಹಾಗೂ ಎಣ್ಣೆಮಜ್ಜನ ಸೇವೆ ಸಂಪ್ರದಾಯದಂತೆ ನೆರವೇರಿತು.
ಶುಕ್ರವಾರ ಬೆಳಗಿನ ಜಾವ 3 ಗಂಟೆಯಿಂದ 6.30ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಛತ್ರಿ ಚಾಮರ ವಾದ್ಯಮೇಳದೊಂದಿಗೆ ದೇಗುಲ ಸಮೀಪದ ನಂದನವನದ ಮಜ್ಜನ ಬಾವಿಗೆ ತೆರಳಿ ಆಗ್ರೋದಕ ಹಾಗೂ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕರೆದ ಹಾಲನ್ನು ಮೆರವಣಿಗೆಯ ಮೂಲಕ ದೇಗುಲಕ್ಕೆ ತಂದರು.
ಸ್ವಾಮಿಗೆ ಸಂಕಲ್ಪಾದಿ, ಗಣಪತಿ ಪೂಜೆ, ಪಂಚಕಳಸ ಪೂಜೆ, ಏಕವಾರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಎಳನೀರು, ಜೇನುತುಪ್ಪ, ಮೊಸರು, ಸಕ್ಕರೆ, ಖರ್ಜೂರ, ದ್ರಾಕ್ಷಿಯ ಮೂಲಕ ಹಾಲಿನ ಅಭಿಷೇಕ ನೆರವೇರಿಸಿದರು. ಬಳಿಕ 2ನೇ ಅಭಿಷೇಕದ ವಿಶೇಷ ಪೂಜೆಯಲ್ಲಿ ಮಾದಪ್ಪನಿಗೆ ಅಭಿಷೇಕ ಅರ್ಚನೆ, ಏಕವಾರು ರುದ್ರಾಭಿಷೇಕ, ಸಂಕಲ್ಪ ಬಿಲ್ವಾರ್ಚನೆ, ನವರತ್ನ ಕಿರೀಟಧಾರಣೆ, ಧೂಪದಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.