

ಶಿರಸಿ : ಲಾಕ್ಡೌನ್ ವೇಳೆ ದೌರ್ಜನ್ಯದ ದೂರುಗಳು ಬರದಂತೆ ಪೊಲೀಸರು ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಸಂಬಂಧ ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸರು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರಸ್ತೆ, ನೀರಾವರಿ, ಬಾವಿ, ಬಾಂದಾರು, ಸೇತುವೆ ಸೇರಿ ಅಗತ್ಯ ಕಾಮಗಾರಿಗೆ ಅವಕಾಶ ನೀಡಲಾಗಿದೆ. ಕೃಷಿ ಕಾರ್ಯಕ್ಕೆ ಸಂಬಂಧಿಸಿ ರೈತರಿಗೆ ಯಾವುದೇ ನಿರ್ಬಂಧ ಇಲ್ಲ. ಪೊಲೀಸರು ಕೂಡ ಅನಗತ್ಯವಾಗಿ ಕಿರುಕುಳ ನೀಡಬಾರದು ಎಂದರು.
ಗ್ರಾಮೀಣ ಭಾಗದ ಜನರು ನಗರ ಪ್ರದೇಶಕ್ಕೆ ಬರಬಾರದು, ನಗರದ ನಿವಾಸಿಗಳು ಅನಗತ್ಯವಾಗಿ ಹೊರಗಡೆ ತಿರುಗಬಾರದು ಎಂದು ವಿನಂತಿಸಿದರು.
ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಮಾತನಾಡಿ, ಸಿದ್ದಾಪುರ ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಲಸಿಕೆ ಕಾರ್ಯ ಆರಂಭಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುತ್ತಿದೆ ಎಂದರು.
ತಾಲೂಕಿನ 2 ಕಡೆ ನೀರಿನ ಸಮಸ್ಯೆ ಎದುರಾಗಿತ್ತು. ಅದನ್ನು ನಿವಾರಿಸಲಾಗಿದೆ ಎಂದರು.
ಡಿವೈಎಸ್ಪಿ ಜಿ. ಟಿ.ನಾಯಕ ಮಾತನಾಡಿ, ಲಾಕ್ಡೌನ್ ಆದೇಶ ಉಲ್ಲಂಘಿಸಿದ 32ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ವಿವಿಧ ಪ್ರಕರಣಕ್ಕೆ ಸಂಬಂಧಿಸಿ 10 ಲಕ್ಷ ರೂ.ಗೂ ಹೆಚ್ಚಿನ ದಂಡ ವಿಧಿಸಲಾಗಿದೆ ಎಂದರು.
ತಾಪಂ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಮಾತನಾಡಿ, ಬನವಾಸಿ ಹಾಗೂ ಭಾಶಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಅಧಿಕಾರಿಗಳು ಈ ಬಗ್ಗೆ ಗಮನ ನೀಡುತ್ತಿಲ್ಲ ಎಂದರು.
ಜಿಪಂ ಸದಸ್ಯೆ ಉಷಾ ಹೆಗಡೆ, ತಾಪಂ ಉಪಾಧ್ಯಕ್ಷ ಚಂದ್ರು ದೇವಾಡಿಗ, ಡಿಎಫ್ಒ ಎಸ್.ಜಿ. ಹೆಗಡೆ, ತಹಸೀಲ್ದಾರ್ ಎಂ.ಆರ್. ಕುಲಕರ್ಣಿ ಇದ್ದರು.
ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಂಗನ ಕಾಯಿಲೆ ಉಲ್ಬಣಿಸಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಜನ-ಜಾನುವಾರುಗಳಿಗೆ ಲಸಿಕೆ, ತೈಲ ವಿತರಿಸಲಾಗಿದೆ. ಜನರು ಕೂಡ ಎಚ್ಚರಿಕೆಯಿಂದ ಇರಬೇಕು. - ಶಿವರಾಮ ಹೆಬ್ಬಾರ, ಜಿಲ್ಲಾ ಉಸ್ತುವಾರಿ ಸಚಿವ