ಮಾನಸಿಕ, ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

18
Published on

ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ವಿಭಾಗೀಯ ಸಹ ನಿರ್ದೇಶಕಿ ಡಾ.ರಾಜೇಶ್ವರಿ ಹೇಳಿದರು.

ಕ್ಷಯರೋಗ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ(ಎನ್‌ಟಿಇಪಿ), ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಹಾಗೂ ರಾಜ್ಯ ಎನ್‌ಟಿಇಪಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಜೆ.ಕೆ. ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಾತನಾಡಿದರು.

ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಜನರಿಗೆ ಹಲವು ಉಪಯೋಗ ದೊರೆಯುತ್ತದೆ. ಜತೆಗೆ ಎನ್‌ಸಿಡಿ(ನಾನ್ ಕಮ್ಯುಕೇಬಲ್ ಡಿಸೀಸ್)ಗಳಾದ ಮಧುಮೇಹ, ಸ್ತನ ಕ್ಯಾನ್ಸರ್, ಹೃದ್ರೋಗ ಸಮಸ್ಯೆ ಸೇರಿದಂತೆ ಇನ್ನಿತರ ಆರೋಗ್ಯ ಸಮಸ್ಯೆ ನಿಯಂತ್ರಿಸಬಹುದಾಗಿದೆ. ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ರೀಡಾ ಚಟುವಟಿಕೆಯಿಂದಾಗಿ ನಿದ್ರಾಹೀನತೆ ಹೋಗಲಾಡಿಸಬಹುದು. ಹೃದಯ ಬಡಿತ ಸರಿಯಾಗಿರುತ್ತದೆ. ಸದಾ ಕ್ರಿಯಾಶೀಲ ಹಾಗೂ ಸಂತೋಷವಾಗಿರಲು ಸಹಕಾರಿಯಾಗುತ್ತದೆ. ಇದರಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ಕ್ರೀಡೆ ಜೀವನ ಒಂದು ಭಾಗವಾಗಬೇಕು. ಕ್ಷಯಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ಹಲವು ಹೆಜ್ಜೆ ಇಡಲಾಗಿದ್ದು, ಅದರಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. 2025ರ ವೇಳೆಗೆ ಕ್ಷಯಮುಕ್ತ ಭಾರತ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಸಿರಾಜ್ ಅಹಮದ್ ಮಾತನಾಡಿ, 2025ರೊಳಗೆ ಕ್ಷಯಮುಕ್ತ ಭಾರತ ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಎಲ್ಲೆಡೆ ವಿವಿಧ ಕಾರ್ಯಕ್ರಮ ರೂಪಿಸಲಾಗಿದೆ. ಕ್ಷಯರೋಗದ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆ ಹೋಗಲಾಡಿಸಲು ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಪ್ರತಿ ವರ್ಷ 4 ಸಾವಿರ ಕ್ಷಯರೋಗಿಗಳು ಪತ್ತೆಯಾಗುತ್ತಿದ್ದಾರೆ. ಅವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಸ್ತುತ 2 ಸಾವಿರ ಪ್ರಕರಣವಿದ್ದು, ನಿರಂತರವಾಗಿ ಚಿಕಿತ್ಸೆ ನೀಡುವುದರೊಂದಿಗೆ ಅರಿವು ಮೂಡಿಸುವ ಕೆಲಸವೂ ನಡೆಯುತ್ತಿದೆ ಎಂದರು.

ಮೈಸೂರು ಮೆಡಿಕಲ್ ಕಾಲೇಜಿನ ಡೀನ್ ಡಾ.ದಾಕ್ಷಾಯಿಣಿ ಟೂರ್ನಿಗೆ ಚಾಲನೆ ನೀಡಿದರು. ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net