

ಬಾಗಲಕೋಟೆ: ಬರುವ ಮಾರ್ಚ ೩ ರಿಂದ ೬ ವರೆಗೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೊಲೀಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನ ಸಿದ್ದತೆಗೆ ಸೂಕ್ತ ಕ್ರೀಯಾ ಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಜರುಗಿದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ೫ ವರ್ಷದೊಳಗಿನ ಮಕ್ಕಳ ಸಮೀಕ್ಷೆ ಕಾರ್ಯ ಕೈಗೊಂಡು ಮಾಹಿತಿ ನೀಡಬೇಕು. ವಲಸೆ ಬಂದ ಮಕ್ಕಳನ್ನು ಗಣನೆಗೆ ತೆಗೆದುಕೊಳ್ಳಲು ತಿಳಿಸಿದರು. ಈಗಾಗಲೇ ಈ ಬಗ್ಗೆ ವೈದ್ಯಾಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ತರಬೇತಿ ನೀಡಲಾಗಿದ್ದು, ಫೆಬ್ರವರಿ ೧೫ ದಿನಗಳ ಒಳಗಾಗಿ ಕ್ರೀಯಾಯೋಜನೆ ಸಿದ್ದಪಡಿಸಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಪೋಲೀಯೋ ಲಸಿಕೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕು. ಈ ಬಗ್ಗೆ ಹೆಚ್ಚಿನ ಜನರಲ್ಲಿ ಅರಿವು ಮೂಡಿಸು ಐಇಸಿ ಚಟುವಟಿಕೆಗಳನ್ನು ಹೆಚ್ಚಿಗೆ ಕೈಗೊಳ್ಳಬೇಕು. ತಾಲೂಕಾ ಹಂತದಲ್ಲಿ ಸಭೆ ನಡೆಸಿ ಕ್ರೀಯಾ ಯೋಜನೆ ಸಿದ್ದಪಡಿಸಲು ತಿಳಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಎಸ್.ಎಂ.ಓ ಡಾ.ಮುಕುಂದ ಗಲಗಲಿ ಮಾತನಾಡಿ ಈ ಹಿಂದೆ ವರ್ಷದಲ್ಲಿ ಎರಡು ಸುತ್ತಿನಲ್ಲಿ ಲಸಿಕೆ ನೀಡಲಾಗುತ್ತಿತ್ತು. ಆದರೆ ಈಗ ಒಂದೇ ಸುತ್ತಿನಲ್ಲಿ ಪೋಲೀಯೋ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್ಲ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಸುವರ್ಣ ಕುಲಕರ್ಣಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ.ಎಸ್.ಸಿ.ಪಾಟೀಲ, ಮಕ್ಕಳ ತಜ್ಞ ಬಡಕಲಿ ಸೇರಿದಂತೆ ಆಯಾ ತಾಲೂಕಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.