

ಮದ್ದೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನವನ್ನು ಮಾರ್ಚ್ ತಿಂಗಳ ಒಳಗೆ ಬಳಕೆ ಮಾಡಬೇಕು. ಇಲ್ಲದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಧನರಾಜ್ ಬೋರಾಳೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಪಟ್ಟಣದ ತಾಪಂ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಅನುದಾನದಲ್ಲಿ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅನುದಾನವನ್ನು ಮಾರ್ಚ್ ತಿಂಗಳ ಒಳಗೆ ಬಳಕೆ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಹಾಗಾಗಿ ಇನ್ನೆರಡು ತಿಂಗಳಲ್ಲಿ ಅನುದಾನವನ್ನು ಪೂರ್ಣವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಗೆ ಪೂರ್ಣ ಪ್ರಮಾಣದ ಮಾಹಿತಿ ಇಲ್ಲದೆ ಹಾಜರಾಗಿದ್ದ ಶಿಕ್ಷಣ ಇಲಾಖೆ ಇಸಿಒ ಅವರನ್ನು ಸಭೆಯಲ್ಲಿ ತರಾಟೆಗೆ ತೆಗೆದುಕೊಳ್ಳಲಾಯಿತು. ಎರಡು ತಿಂಗಳಿಗೊಮ್ಮೆ ನಡೆಯುವ ಸಭೆಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಾಗುತ್ತಿಲ್ಲ, ಕೆಳಹಂತದ ಅಧಿಕಾರಿಗಳು ಬರುತ್ತಿದ್ದಾರೆ. ಅವರು ಸಹ ಸರಿಯಾಗಿ ಸಭೆಗೆ ಮಾಹಿತಿ ನೀಡುತ್ತಿಲ್ಲ. ಹೀಗೆ ಮುಂದುವರಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಧನರಾಜ್ ಬೋರಾಳೆ ಎಚ್ಚರಿಕೆ ನೀಡಿದರು.
ನರೇಗಾ ಯೋಜನೆಯ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮಂಡ್ಯ ಜಿಲ್ಲೆ 27ನೇ ಸ್ಥಾನದಲ್ಲಿದೆ. ಹಾಗಾಗಿ ಇನ್ನೆರಡು ತಿಂಗಳೊಳಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಪ್ರಚಾರ ನೀಡಿ ನರೇಗಾ ಕಾಮಗಾರಿಗಳು ಹೆಚ್ಚು ನಡೆಯುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ತಾಪಂ ಇಒ ಸಂದೀಪ್ ಸಲಹೆ ನೀಡಿದರು.
ಈಗಾಗಲೇ ಕರೊನಾ 4ನೇ ಅಲೆಯ ಭೀತಿ ಎದುರಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಭೆಯಲ್ಲಿ ಧನರಾಜ್ ಬೋರಾಳೆ ಪ್ರಶ್ನಿಸಿದರು.
ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಮಾತನಾಡಿ, ಈಗಾಗಲೇ ಸೋಂಕಿನ ತಡೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕ್ಷಯರೋಗ, ನ್ಯುಮೋನಿಯಾ ಹಾಗೂ ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳನ್ನು ಗುರುತಿಸಿ ಆಶಾ, ನರ್ಸ್ ಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಐಸೋಲೇಶನ್, ಬೂಸ್ಟರ್ ಡೋಸ್‌ಗಳನ್ನು ನೀಡಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ತಿಳಿಸಿದರು.
ತಾಲೂಕಿನಲ್ಲಿ ಚರ್ಮಗಂಟು ರೋಗದಿಂದ ಹಲವು ಜಾನುವಾರುಗಳು ಸಾವಿಗೀಡಾದ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಮೃತಪಟ್ಟಿರುವ ಜಾನುವಾರುಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಪ್ರವೀಣ್‌ಕುಮಾರ್ ಸಭೆಗೆ ತಿಳಿಸಿದರು.
ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿಯ ಬಗ್ಗೆ ಸಭೆಗೆ ತಿಳಿಸಿದರು. ಸಹಾಯಕ ಕೃಷಿ ಅಧಿಕಾರಿ ಪರಮೇಶ್ವರ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾಗಲಕ್ಷ್ಮೀ ಇತರರಿದ್ದರು.