

ತುಮಕೂರು: ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಮಾರ್ಚ್ ಅಂತ್ಯದೊಳಗೆ ಖರ್ಚು ಮಾಡುವ ಹೊಣೆ ಜಿಲ್ಲಾ ಮಟ್ಟದ ಅಧಿಕಾರಿಗಳ ಮೇಲಿದ್ದು, ಉದಾಸೀನ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಕಂಟಕವಾದರೆ ಸಹಿಸುವುದಿಲ್ಲ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಲತಾ ಹೇಳಿದರು.
ಜಿಪಂ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅನುದಾನ ವ್ಯರ್ಥ ಮಾಡದೆ, ಜಿಲ್ಲಾ ಪಂಚಾಯಿತಿ ಅನುಮೋದನೆ ನೀಡಿರುವ ಕಾಮಗಾರಿಗಳನ್ನು ಕೈಗೊಂಡು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಸಭೆಯ ಆರಂಭದಲ್ಲಿಯೇ ಶಾಲೆ ಆರಂಭವಾಗಿರುವ ಬಗ್ಗೆ ಡಿಡಿಪಿಐಗಳಿಂದ ಮಾಹಿತಿ ಪಡೆಯಲಾಯಿತು, ಶಾಲೆಯ ವಾತಾವರಣ, ಮಕ್ಕಳು ಮತ್ತು ಪಾಳಕರ ಅಭಿಪ್ರಾಯಗಳ ಬಗ್ಗೆ ತಿಳಿದುಕೊಳ್ಳಲಾಯಿತು. ದೀರ್ಘಕಾಲದ ನಂತರ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಶಾಲೆಗೆ ಹೊಂದಿಕೊಳ್ಳುವಂತೆ ಮನವೊಲಿಸಬೇಕು, ಮಕ್ಕಳಿಗೆ ಭಯಪಡದಂತೆ ಕರೊನಾ ಮಾರ್ಗಸೂಚಿಯನ್ವಯ ಮಾಸ್ಕ್ ಧರಿಸಿಕೊಳ್ಳುವುದು, ಪರಸ್ಪರ ಅಂತರ ಕಾಯ್ದುಕೊಳ್ಳುವಂತೆ ತಿಳಿಸಬೇಕು, ಅಲ್ಲದೇ ಮಕ್ಕಳಿಗೆ ಕುಡಿಯಲು ಶುದ್ಧ ನೀರು ಹಾಗೂ ಶಾಲೆಗಳಲ್ಲಿ ಶೌಚಗೃಹ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಸೂಚಿಸಿದು.
ಸ್ಥಾಯಿಸಮಿತಿ ಅಧ್ಯಕ್ಷ ಕೆಂಪಚೌಡಯ್ಯ ಮಾತನಾಡಿ, ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಧುಗಿರಿ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದೆಯಾದರೂ ಶಿರಾ ತಾಲೂಕಿನಲ್ಲಿ ಕಡಿಮೆ ಫಲಿತಾಂಶ ಬಂದಿದೆ. ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಫಲಿತಾಂಶ ಬರುವಂತೆ ಗಮನಹರಿಸಬೇಕು ಎಂದರು.
ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಪ್ರಶ್ನೆಗೆ ಉತ್ತರಿಸಿದ ಡಿಎಚ್‌ಒ ಡಾ.ನಾಗೇಂದ್ರಪ್ಪ, ಜಿಲ್ಲೆಯಲ್ಲಿ ಕರೊನಾ ನಿಯಂತ್ರಣವಾಗಿದ್ದು, ಈವರೆಗೂ 173 ಪ್ರಕರಣ ಸಕ್ರಿಯವಾಗಿವೆ, 140 ಪ್ರಕರಣಗಳು ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ. ಜಿಲ್ಲೆಗೆ 36 ಸಾವಿರ ಕರೊನಾ ಲಸಿಕೆ ಬಂದಿದ್ದು, ಮೊದಲ ಹಂತದಲ್ಲಿ 16 ಸಾವಿರ ಆರೋಗ್ಯ ಕಾರ್ಯಕರ್ತೆಯರು, ಸಿಬ್ಬಂದಿಗೆ ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದರು. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ, ಮುಖ್ಯ ಯೋಜನಾಧಿಕಾರಿ ಬಾಲರಾಜ್, ಉಪಕಾರ್ಯದರ್ಶಿ ಕೃಷ್ಣಮೂರ್ತಿ, ರಮೇಶ್ ಇದ್ದರು.
ರಾಗಿ ಮಾರಾಟದಲ್ಲಿ ರೈತರಿಗೆ ಅನ್ಯಾಯ : ರಾಗಿ ಬೆಳೆಗೆ ಬೆಂಬಲ ಬೆಲೆ ಸಿಗಬೇಕು ಎನ್ನುವ ಉದ್ದೇಶದಿಂದ ರಾಗಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಆದರೆ, ರಾಗಿ ಕೇಂದ್ರಗಳಲ್ಲಿ ವರ್ತಕರು ರಾಗಿ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಸದಸ್ಯ ರಾಮಚಂದ್ರಯ್ಯ ಆರೋಪಿಸಿದರು. ರೈತರಿಗೆ ಉಪಯೋಗವಾಗುವಂತೆ ಸಾವಯವ ಕೃಷಿ ಬಗ್ಗೆ ತರಬೇತಿ ನೀಡಬೇಕು, ಪ್ರತಿಯೊಬ್ಬ ರೈತನು ತನ್ನ ಬೆಳೆಗೆ ಬೆಳೆ ವಿಮೆ ಮಾಡಿಸುವಂತೆ ರೈತರಿಗೆ ತಾಕೀತು ಮಾಡಬೇಕು. ಜಿಲ್ಲೆಯ 197263 ಅತಿ ಸಣ್ಣ ರೈತರು, 113436 ಸಣ್ಣ ರೈತರು,103729 ಇತರೆ ರೈತರಿಗೆ ಸರ್ಕಾರದ ಯೋಜನೆಗಳ ಮಾಹಿತಿ ದೊರೆಯದೇ ಯಾವುದೇ ಸೌಲಭ್ಯಗಳು ತಲುಪುತ್ತಿಲ್ಲ ಎಂದು ಸ್ಥಾಯಿಸಮಿತಿ ಅಧ್ಯಕ್ಷ ಕೆಂಪಚೌಡಯ್ಯ ಹೇಳಿದರು.