ದಾವಣಗೆರೆ: ಮಾಸಿಕ ಪಿಂಚಣಿ ಯೋಜನೆ ಹಾಗೂ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ನ ಜಿಲ್ಲಾ ಸಮಿತಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.
ಜಯದೇವ ವೃತ್ತದಿಂದ ಉಪವಿಭಾಗಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತೆಯರು ಎಸಿ ದುರ್ಗಾಶ್ರೀ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕನಿಷ್ಠ ಗೌರವಧನ ಆಧಾರದಡಿ ಸೇವೆ ಸಲ್ಲಿಸುತ್ತಿದ್ದಾರೆ. ಆರು ವರ್ಷದೊಳಗಿನ ಮಕ್ಕಳು ಮತ್ತು ಅವರ ತಾಯಂದಿರಿಗೆ ಪೌಷ್ಟಿಕ ಆಹಾರ ನೀಡಿ ಆರೋಗ್ಯ ರಕ್ಷಣೆಯೊಂದಿಗೆ ಶಾಲಾ ಪೂರ್ವ ಶಿಕ್ಷಣದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಅವರ ಕ್ಷೇಮಾಭಿವೃದ್ಧಿ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಅವರ ನಿವೃತ್ತಿ ವೇಳೆ ಸರ್ಕಾರಗಳು ಕನಿಷ್ಠ ಪ್ರಮಾಣದ ಇಡುಗಂಟನ್ನು ನೀಡಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿವೆ. ಅವರ ನಿವೃತ್ತಿ ಜೀವನ ನಿರ್ವಹಣೆಗಾಗಿ ಅಗತ್ಯ ಪಿಂಚಣಿ, ಆರೋಗ್ಯದಂತಹ ಸಾಮಾಜಿಕ ಸುರಕ್ಷಾ ಯೋಜನೆಗಳನ್ನು ಜಾರಿಗೊಳಿಸಲು ಆಸಕ್ತಿ ವಹಿಸುತ್ತಿಲ್ಲ. ಹಾಗಾಗಿ ನಿವೃತ್ತ ಕಾರ್ಯಕರ್ತೆ-ಸಹಾಯಕಿಯರು ನರಕಯಾತನೆ ಅನುಭವಿಸುತ್ತಿದ್ದಾರೆ. ವಯೋಸಹಜ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳಿಂದ ಬಳಲುತ್ತಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪಿನನ್ವಯ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಕನಿಷ್ಠ 5 ಸಾವಿರ ರೂ.ಗಳ ಮಾಸಿಕ ಪಿಂಚಣಿ ಹಾಗೂ ಗ್ರಾಚ್ಯುಟಿ ಸೌಲಭ್ಯವನ್ನು ಕರ್ನಾಟಕದಲ್ಲಿ ಶಾಸನಾತ್ಮಕವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಸಂಚಾಲಕರಾದ ಆವರಗೆರೆ ಚಂದ್ರು, ಆವರಗೆರೆ ವಾಸು, ರಾಜ್ಯ ಸಮಿತಿ ಸದಸ್ಯೆ ಸರ್ವಮ್ಮ, ಜಿಲ್ಲಾಧ್ಯಕ್ಷೆ ಎಂ.ಬಿ.ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಮಲ್ಲಮ್ಮ, ಖಜಾಂಚಿ ವಿಶಾಲಾಕ್ಷಿ ಮೃತ್ಯುಂಜಯ, ತಾಲೂಕು ಅಧ್ಯಕ್ಷೆ ರೇಣುಕಾ, ಸಿ.ಬಿ.ಕಾಳಮ್ಮ, ಸುಧಾ ಇತರರಿದ್ದರು.
---