

ಹಾಸನ: ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿರುವುದರಿಂದ ಭಾರಿ ಮಳೆಯಿಂದ ಉಂಟಾಗುವ ಸಂಭವನೀಯ ಪ್ರವಾಹ ಪೀಡಿತ ಹಾಗೂ ಭೂಕುಸಿತ ಸ್ಥಳಗಳಲ್ಲಿ ಮುಂಜಾಗ್ರತೆಯ ಕ್ರಮವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮೂಲಕ ಎಚ್ಚರದಿಂದಿರಲೂ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು, ಮಳೆಯಿಂದ ಯಾವುದೇ ರೀತಿಯ ಜನ, ಜಾನುವಾರು ಹಾನಿಯಾಗದಂತೆ ನಿಗಾವಹಿಸುವಂತೆ ತಿಳಿಸಿದರಲ್ಲದೆ, ಸಿಡಿಲಿನಿಂದ ಸಾವು ಸಂಭವಿಸುವುದನ್ನು ತಪ್ಪಿಸಲು ಜನರು ಮುನ್ನೆಚ್ಚರಿಕೆ ಅನುಸರಿಸಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜಕಾಲುವೆಗಳ ಹೂಳು ತೆಗೆದು ಸ್ವಚ್ಚತೆಗೆ ಕ್ರಮ, ವಿದ್ಯುತ್ ಕಂಬಗಳು ಹಾಗೂ ತಂತಿಗಳು ಸುವ್ಯವಸ್ಥಿತವಾಗಿರುವ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಿಲ್ಲ, ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಪೂರೈಕೆ. ರೈತ ಸಂಪರ್ಕ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ದಾಸ್ತಾನು ಪರಿಶೀಲಿಸುವಂತೆ ಡಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದ ಸಂದರ್ಭದಲ್ಲಿ ಕುಡಿಯುವ ನೀರು ಕಲುಷಿತಗೊಂಡು ಯಾವುದೆ ಆರೋಗ್ಯದ ಸಮಸ್ಯೆಗಳು ಉಂಟಾಗದಂತೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರು ಮಾತನಾಡಿ ಪ್ರತಿ 15 ದಿನಗಳಿಗೋಮ್ಮೆ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.