

ಬೀದರ್: ಮಳೆ ಹಾನಿ ಪರಿಶೀಲನೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿರುವುದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಗೀತಾ ಪಂಡಿತರಾವ್ ಚಿದ್ರಿ ತೀವ್ರವಾಗಿ ಖಂಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಗೂಂಡಾ ವರ್ತನೆ ತೋರಿರುವುದು ಅಕ್ಷಮ್ಯ. ಬಿಜೆಪಿ ಅಡಳಿತದಲ್ಲಿ ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದಕ್ಕೆ ಕೊಡಗು ಘಟನೆಯೇ ನಿದರ್ಶನವಾಗಿದೆ ಎಂದು ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕರಿಗೆ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಕಾರಣ, ಕೊಡಗಿನಲ್ಲಿ ಆಗಿರುವ ಭದ್ರತಾ ಲೋಪದ ಹೊಣೆಯನ್ನು ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕಾಗುತ್ತದೆ. ಆಡಳಿತ ಪಕ್ಷದ ಕಾರ್ಯಕರ್ತರೇ ಮೊಟ್ಟೆ ಎಸೆದಿದ್ದರಿಂದ ಘಟನೆಯಲ್ಲಿ ಆಡಳಿತದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ.
ಮೊಟ್ಟೆ ಎಸೆದ ಕಾರ್ಯಕರ್ತರನ್ನು ಕೂಡಲೇ ಬಂಧಿಸಬೇಕು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಬೇಕು. ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಮೊಟ್ಟೆ ಎಸೆತ ಘಟನೆ ಖಂಡಿಸಿ ಕಾಂಗ್ರೆಸ್ ಆ. 26 ರಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೊಡಗಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರಯುಕ್ತ ಪಕ್ಷದಿಂದ ಕೊಡಗು ಚಲೋ ಅಭಿಯಾನ ನಡೆಸಲಾಗುತ್ತಿದೆ. ಬೀದರ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.