

ರಾಯಚೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಡಕಟ್ಟು ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೂ. 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಭವನದಲ್ಲಿ ಮಂಗಳವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜೂ.23ರಂದು ತಾಲೂಕಿನ ಯರಗೇರಾ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಹತ್ತಿರ ಬುಡಕಟ್ಟು ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
371(ಜೆ) ದಶಮಾನೋತ್ಸವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ 371(ಜೆ) ಪ್ರಮಾಣ ಪತ್ರದ ಮೂಲಕ ವಿವಿಧ ಉನ್ನತ ಹುದ್ದೆಗಳಿಗೆ ನೇಮಕಾತಿಯಾದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿಯವರ ಕಂಚಿನ ಪುತ್ಥಳಿ ಹಾಗೂ ಲೋಗೋ ಅನಾವರಣ ನಡೆಯಲಿದೆ ಎಂದರು.
ಜಿಲ್ಲಾಧಿಕಾರಿ ನಿತೀಶ್ ಕೆ. ಮಾತನಾಡಿ, ತಾಲೂಕಿನ ಯರಗೇರ ಗ್ರಾಮದಲ್ಲಿ ಬುಡಕಟ್ಟು ಉತ್ಸವ ಕಾರ್ಯಕ್ರಮಕ್ಕೆ
ಮುಖ್ಯಮಂತ್ರಿಗಳು ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲಾಡಳಿತದಿಂದ ಸ್ವಾಗತ ಸಮಿತಿ, ಸ್ಥಳ, ವೇದಿಕೆ ವ್ಯವಸ್ಥೆ ಸಮಿತಿ, ಕಾನೂನು ಸುವ್ಯವಸ್ಥೆ ಹಾಗೂ ಭದ್ರತಾ ಸಮಿತಿ, ಆಹಾರ ಕುಡಿಯುವ ನೀರು ಮತ್ತು ವಿಶ್ರಾಂತಿ ವ್ಯವಸ್ಥೆ ಸಮಿತಿ, ಪತ್ರಿಕಾ ಮತ್ತು ಮಾಧ್ಯಮ ನಿರ್ವಹಣಾ ಸಮಿತಿ, ವೈದ್ಯಕೀಯ ಮತ್ತು ತುರ್ತು ಸೇವಾ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಎಲ್ಲಾ ಸಮಿತಿಯ ಅಧಿಕಾರಿಗಳು ತಮ್ಮ- ತಮ್ಮ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಎಸಿ ಗಜಾನನ ಬಾಳೆ, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಯೋಜನಾಧಿಕಾರಿ ಡಾ.ಟಿ.ರೋಣಿ, ಡಾ.ಕೆ.ಆರ್.ದುರುಗೇಶ್, ಪುಡ್ ಡಿಡಿ ಕೃಷ್ಣ, ಅಶೋಕ ಕೋಲ್ಕಾರ್ ಸೇರಿ ಅನೇಕ ಇಲಾಖೆಯ ಅಧಿಕಾರಿಗಳು ಇದ್ದರು.