

ಮೈಸೂರು: ಹವಾಮಾನ ಇಲಾಖೆಯಿಂದ ಮಳೆಯ ಪ್ರಮಾಣದ ಬಗ್ಗೆ ಮಾಹಿತಿ ಆಧರಿಸಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹವಾಮಾನ, ಮಳೆ- ಬೆಳೆ ಸಂಬಂಧಿತ ಸ್ಥಿತಿಗತಿಗಳ ಕುರಿತು ಪರಿಶೀಲಿಸಲು ಬುಧವಾರ ಆಯೋಜಸಿದ್ದ ವೀಡಿಯೋ ಕಾನ್ಫರೆನ್ಸ್ ಸಭೆ ಮೂಲಕ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ನಿರ್ದೇಶನ ನೀಡಿದರು.
ಮಳೆ ಮಾಹಿತಿ ಆಧರಿಸಿ ಹಾನಿಯಿಂದ ಆಗುವ ಪ್ರಾಣ ಹಾನಿಯನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಖು. ಜಲಪಾತಗಳು, ಜಲಾವೃತ ಆಗಿರುವ ಸೇತುವೆಗಳ ಬಳಿ ಹಾಗೂ ನದಿಗಳ ಬಳಿ ಜನರು ಹೋಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಾವು ನೋವುಗಳು ಸಂಭವಿಸದಂತೆ ತಡೆಗಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಹ ಉಂಟಾಗಬಹುದಾದ ಗ್ರಾಮದ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕು, ಪದೆ ಪದೇ ಪ್ರವಾಹ ಬರುವ ಗ್ರಾಮಗಳನ್ನು ಗುರುತಿಸಿ, ಆ ಗ್ರಾಮಗಳನ್ನು ಸ್ಥಳಾಂತರಿಸಿ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಇರುವ ಕ್ರಮಗಳನ್ನು ಗುರುತಿಸಿ ಎಂದು ನಿರ್ದೇಶನ ನೀಡಿದರು.
ಪ್ರತಿ ಜಿಲ್ಲೆಯಲ್ಲಿಯೂ ವಾರ್ ರೂಂ ತೆರೆದು ಸಹಾಯವಾಣಿ ಆರಂಭಿಸಬೇಕು, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸರಾಸರಿ 20 ಕೋಟಿ ರೂ. ಅನುದಾನ ಇದ್ದು ಅಗತ್ಯ ಇರುವ ಕಡೆ ಬಳಸಿ. ಮಳೆಯಿಂದ ಪ್ರಾಣ ಹಾನಿ, ಮನೆ ಹಾನಿ ಉಂಟಾಗಿರುವ ವವರಿಗೆ ಪರಿಹಾರ ವಿತರಣೆ ಮಾಡಿ ಎಂದು ಹೇಳಿದರು.
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ವಿತರಣೆ ಮಾಡಬೇಕು. ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಇರಬೇಕು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು, ಸಾರ್ವಜನಿಕರಿಗೆ ದೊರೆಯುವಂತೆ ಇರಬೇಕು. ಶಾಲೆ, ಅಂಗನವಾಡಿ ಕಟ್ಟಡಗಳ ಸ್ಥಿತಿಗತಿ ಗುರುತಿಸಿ ಎಸ್‌ಡಿಆರ್‌ಎಫ್ ಅನುದಾನದಲ್ಲಿ ದುರಸ್ಥಿ ಮಾಡಿ ಎಂದು ಸೂಚನೆ ನೀಡಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಹವಾಮಾನ ಇಲಾಖೆಯ ವರದಿಯ ಪ್ರಕಾರ ಜುಲೈ 29 ರವರಿಗೆ ಉತ್ತಮ ಮಳೆಯಾಗುತ್ತದೆ. ಆಗಸ್ಟ್ ತಿಂಗಳಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು ಪ್ರತಿದಿನ ರಾಜ್ಯದಲ್ಲಿ ಸರಾಸರಿ 42 ಟಿಎಂಸಿ ನೀರು ಜಲಾಶಯಗಳಲ್ಲಿ ಶೇಖರಣೆ ಆಗುತ್ತಿದೆ ಎಂದರು.
ರಾಜ್ಯದಲ್ಲಿ ಜೂನ್ 1 ರಿಂದ ಇಲ್ಲಿಯವರೆಗೆ 38 ಮಾನವ ಜೀವ ಹಾನಿ ಆಗಿದ್ದು, 35 ಜನರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ 57 ಮನೆಗಳು, ತೀವ್ರವಾಗಿ 208 ಹಾಗೂ 2682 ಮನೆಗಳು ಭಾಗಶಃ ಹಾನಿಗೊಂಡಿವೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು, ಜಿಲ್ಲೆಗಳಲ್ಲಿ ಆಗಿರುವ ಮಳೆಯ ಪ್ರಮಾಣ, ಮಳೆ ಹಾನಿ, ಹಾನಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳು, ಬಿತ್ತನೆ, ರಸಗೊಬ್ಬರ ಸೇರಿದಂತೆ ಕೈಗೊಂಡಿರುವ ಕೃಷಿ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ನಗರಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಇತರರೆ ಅಧಿಕಾರಿಗಳು ಇದ್ದರು.