ಮುಡಾ ಹಗರಣ ಚರ್ಚಿಸಲಿಲ್ಲವೇಕೆ ?

BJP
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.6848416, 0.46482143);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 43;
Published on

ಚಿತ್ರದುರ್ಗ: ಮುಡಾದಲ್ಲಿ ನಡೆದಿರುವ ನಿವೇಶನಗಳ ಹಗರಣ ಸಂಬಂಧ ಸಿಎಂ ಉತ್ತರಿಸುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ವಿಧಾನಸಭಾ ಅಧಿವೇಶನದಲ್ಲಿ ಸಭಾಧ್ಯಕ್ಷರು ಚರ್ಚಿಸಲು ಅವಕಾಶ ನೀಡಲಿಲ್ಲ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು.

ತಿರುಮಲ ಕಲ್ಯಾಣ ಮಂಟಪದಲ್ಲಿ ಬುಧವಾರ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.

ಯು.ಟಿ.ಖಾದರ್ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕುರಿತು ಚರ್ಚಿಸಲು ಅವಕಾಶ ಕೊಟ್ಟರು. ಆದರೆ, ಮುಡಾ ಕುರಿತು ಚರ್ಚಿಸಲು ಬಿಡಲಿಲ್ಲ. ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಬ್ಯಾಂಕ್‌ಗೆ ಹಣ ವರ್ಗಾವಣೆಯಾದ ದಿನವೇ ರಾಜ್ಯದ ಸಿಎಂ ಸಿದ್ದರಾಮಯ್ಯ ಸಾಲ ಪಡೆದಿದ್ದಾರೆ. 187 ಕೋಟಿ ರೂ. ಹಗರಣ ಬೆಳಕಿಗೆ ಬಂದ ಕೂಡಲೇ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಿತ್ತು. ಆದರೆ, ಭಂಡತನಕ್ಕೆ ಬಿದ್ದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎಂಎಲ್ಸಿ ಕೆ.ಎಸ್.ನವೀನ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಸತ್ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲ್ಲು ಸಾಧ್ಯವಾಗಲಿಲ್ಲ. ಇದಕ್ಕೆ ಮೈತ್ರಿ ಪಕ್ಷದ ಕಾರ್ಯಕರ್ತರ ಶ್ರಮವೇ ಕಾರಣ ಎಂದರು.

ಗ್ಯಾರಂಟಿ ತಲುಪುತ್ತಿಲ್ಲ: ಚುನಾವಣೆ ಪೂರ್ವದಲ್ಲಿ ಉಚಿತ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದಿದ್ದರೂ ಸಮರ್ಪಕವಾಗಿ ನೀಡಲು ಸಿಎಂಗೆ ಆಗುತ್ತಿಲ್ಲ. ಅದಕ್ಕಾಗಿ ಮೂರು ತಿಂಗಳಿಗೊಮ್ಮೆ ಹೊಸ ಸಾಲಕ್ಕೆ ಮುಂದಾಗುವ ಮೂಲಕ ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಟೀಕಿಸಿದರು.

ಮುಂಬರುವ 3 ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ಎದುರಾಗಲಿದೆ. ಪಕ್ಷದ ಕಾರ್ಯಕರ್ತರಿಗೆ ಇದು ಅಗ್ನಿಪರೀಕ್ಷೆಯಾಗಿದ್ದು, ಚುನಾವಣೆಯನ್ನು ಎದುರಿಸಲು ಕಾರ್ಯಕರ್ತರೆ ಅಭ್ಯರ್ಥಿಗಳಾಗಿ ಈಗಿನಿಂದಲೇ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ, ಗ್ಯಾರಂಟಿಯಿಂದ ಅಧಿಕಾರ ಪಡೆದ ಕಾಂಗ್ರೆಸ್ ಸರ್ಕಾರದ ವಾರೆಂಟಿ ಮುಗಿದಿದೆ. ಎಸ್ಸಿ-ಎಸ್ಟಿ ಸಮುದಾಯ, ರೈತರಿಗೆ ದ್ರೋಹವೆಸಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅಧಿಕಾರದಿಂದ ಕೆಳಗಿಳಿಸಲು ಹೋರಾಟ ಅನಿವಾರ್ಯ ಎಂದರು.

ಪಾದಯಾತ್ರೆಯಲ್ಲಿ ಪಾಲ್ಗೊಳ್ಳಿ: ಬಿಜೆಪಿ ರಾಜ್ಯ ಕಾರ್ಯದರ್ಶಿ ಮುನಿರಾಜು ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣ ಸಂಬಂಧ ಆ. 3ರಂದು ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಹೊರಟಿರುವ ಪಾದಯಾತ್ರೆಯಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಿ.ಟಿ.ಸುರೇಶ್ ಸಿದ್ಧಾಪುರ, ಸಂಪತ್‌ಕುಮಾರ್, ಬಾಳೆಕಾಯಿ ರಾಂದಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net