ಮುನಿರತ್ನರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಪ್ರತಿಭಟನೆ

ಮುನಿರತ್ನರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಪ್ರತಿಭಟನೆ
Published on

ಹಾಸನ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಒಕ್ಕಲಿಗ ಸಮುದಾಯದ ಮಹಿಳೆಯನ್ನು ಬಹಿರಂಗವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರಿನ ಆರ್‌ಆರ್ ನಗರದ ಶಾಸಕ ಮುನಿರತ್ನ ನಾಯ್ಡು ಅವರ ವಿಧಾನಸಭಾ ಸದಸ್ಯತ್ವ ಸ್ಥಾನವನ್ನ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುನಿರತ್ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ‘ಶಾಸಕರಾಗಿ ಮಹಿಳಾ ನಿಂದನೆ ಮತ್ತು ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೆ ಲಂಚಕ್ಕೆ ಬೇಡಿಕೆ ಇಟ್ಟು ಮಹಿಳೆಯ ಬಗ್ಗೆ ಕೆಟ್ಟ ದೃಷ್ಟಿಯಿಂದ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈತನ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು,’ ಎಂದು ಒತ್ತಾಯಿಸಿದರು.
ಈಗಾಗಲೇ ಶಾಸಕ ಮುನಿರತ್ನನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು ಮತ್ತು ತಕ್ಷಣವೇ ಶಾಸಕ ಸ್ಥಾನದಿಂದ ವಜಾ ಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ಎಚ್.ಕೆ. ಸಂದೇಶ್, ಎಂ.ಸೋಮಶೇಖರ್, ವಳಲಹಳ್ಳಿ ವೀರೇಶ್, ಆರ್‌ಪಿಐ ಸತೀಶ್, ಪೃಥ್ವಿ, ರಮೇಶ್ ದೊಡ್ಡನಗರ, ಲೋಕೇಶ್, ಮಧು, ದೀಪು ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net