

ಚಾಮರಾಜನಗರ: ಜಿಲ್ಲಾಕೇಂದ್ರದಲ್ಲಿ ಬಾಲ್ಯವಿವಾಹ ನಿಯಂತ್ರಣ ಅರಿವು ಮೂಡಿಸುವ ಘೋಷಣೆಗಳೊಂದಿಗೆ ಮೇ 23 ರಂದು ಬೃಹತ್ ವಾಕಥಾನ್, ಪ್ರತಿಜ್ಞಾ ಸ್ವೀಕಾರ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಬಾಲ್ಯವಿವಾಹ ನಿಷೇದಾಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾ.1 ರಿಂದ ನ.14 ರವರೆಗೆ ಪ್ರತಿ ಗ್ರಾಮ ಪಂಚಾಯಿತಿಗಳು ಹಾಗೂ ಎಲ್ಲಾ ತಾಲೂಕುಗಳನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ಕುರಿತು ಪ್ರಸ್ತಾಪಿಸಲಾಗಿತ್ತು. ಬಾಲ್ಯವಿವಾಹ ನಿರ್ಮೂಲನೆ ಕಾರ್ಯದಲ್ಲಿ ಪ್ರಗತಿ ಸಾಧಿಸಿ ಉತ್ತಮ ಫಲಿತಾಂಶ ನೀಡುವ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸುವ ಗುರಿ ಹೊಂದಲಾಗಿತ್ತು. ಅದರನ್ವಯ ಬಾಲ್ಯವಿವಾಹ ನಿಯಂತ್ರಣಕ್ಕೆ ಎಲ್ಲರೊಂದಿಗೆ ಸಮನ್ವಯ ಸಾಧಿಸಿ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬಾಲ್ಯವಿವಾಹವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ಮೇ 23ರಂದು ಬೃಹತ್ ಜಾಗೃತಿ ಕಾರ್ಯಕ್ರಮವನ್ನು ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದೆ. ಅಂದು ಜಿಲ್ಲೆಯ ಗ್ರಾಮಪಂಚಾಯಿತಿಗಳು, ತಾಲೂಕುಗಳಲ್ಲಿಯೂ ಕಾರ್ಯಕ್ರಮ ಆಯೋಜಿತವಾಗಿದೆ. ಜಿಲ್ಲಾಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು, ವರ್ತಕರು, ಉದ್ಯಮಿಗಳು, ವಿವಿಧ ಸಂಘಸಂಸ್ಥೆಗಳು ಪಾಲ್ಗೊಳ್ಳಲಿವೆ. ವಾಕಾಥಾನ್ ಕಾರ್ಯಕ್ರಮ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಿಂದ ಆರಂಭವಾಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಸೂಚನೆ ನೀಡಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಮಾತನಾಡಿ, ಜಿಲಲೆಯಲ್ಲಿ ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಲು ಮುಖ್ಯವಾಗಿ ಅರಿವು ಮೂಡಿಸುವಂತಹ ಪ್ರಭಾವಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯ ಹಾಗೂ ದೇಶದ ಗಮನ ಸೆಳೆಯುವ ಕಾರ್ಯವಾಗಬೇಕು.ಈ ನಿಟ್ಟಿನಲ್ಲಿ ತಳಮಟ್ಟದ ಅಧಿಕಾರಿಗಳಿಂದ ಬಾಲ್ಯವಿವಾಹ ತಡೆಗಟ್ಟುವ ಕಾರ್ಯಕ್ಕೆ ಸ್ಪಂದನೆ ದೊರೆಯಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಡಿವೈಎಸ್‌ಪಿ ಲಕ್ಷ್ಮಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಲುವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಚಿದಂಬರ ಹಾಗೂ ಇತರರು ಉಪಸ್ಥಿತರಿದ್ದರು.